ಮಾನ್ವಿ ತಾಲ್ಲೂಕಿನ ಪೋತ್ನಾಳ ಗ್ರಾಮದ ಅರಿವು ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಸ್ಪರ್ಧಾರ್ಥಿಗಳು ಬುಧವಾರ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕಗಳು, ದಿನಪತ್ರಿಕೆ, ಮಾಸಪತ್ರಿಕೆಗಳನ್ನು ಒದಗಿಸಬೇಕು. ಅಲ್ಲದೆ, ವಿದ್ಯುತ್, ಕುಡಿಯುವ ನೀರು, ಫ್ಯಾನ್, ಕಂಪ್ಯೂಟರ್, ಇಂಟರ್‌ನೆಟ್ ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಗ್ರಂಥಾಲಯ ಸಹಕಾರಿಯಾಗಬೇಕಿದ್ದು, ಅಗತ್ಯ ಸೌಲಭ್ಯಗಳನ್ನು ಶೀಘ್ರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳನ್ನು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಕ್ತರ್ ಪಾಷಾ ಧರಣಿನಿರತರ ಬೇಡಿಕೆಗಳ ಕುರಿತು ಚರ್ಚಿಸಿದರು. ಗ್ರಂಥಾಲಯದ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಸಾಮಾಜಿಕ ಹೋರಾಟಗಾರ ಎ.ಶರಣಕುಮಾರ ಮುದ್ದಂಗುಡ್ಡಿ, ಬಸವರಾಜ ಬಾಗಲವಾಡ, ಕಿರಣಕುಮಾರ ಉದ್ಘಾಳ, ಮೌನೇಶ್, ನಾಗರಾಜ, ಕುಮಾರ, ಅರುಣಕುಮಾರ, ಈರಪ್ಪ ಸೇರಿದಂತೆ ಅನೇಕ ಯುವಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.



