ನಗರದ ಗದ್ದಲ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮೂರನೇ ತರಗತಿ ವಿದ್ಯಾರ್ಥಿಯ ಮೇಲೆ ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಎಸ್ಎಫ್ಐ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಸಿದರು.
ವಸತಿ ಶಾಲೆಯ ಮೇಲ್ವಿಚಾರಕ ಮನೋಹರ್ ಅವರು ವಿದ್ಯಾರ್ಥಿಯ ಮೇಲೆ ಜಾತಿ ನಿಂದನೆ ಮಾಡಿರುವುದಾಗಿ ಗಂಭೀರ ಆರೋಪಗಳು ಕೇಳಿಬಂದಿವೆ. ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಸುರಕ್ಷತೆ ಹಾಗೂ ಮಾನಸಿಕ ಆರೋಗ್ಯ ಕಾಪಾಡುವುದು ಆಡಳಿತ ಮಂಡಳಿ ಮತ್ತು ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ, ಪ್ರಾಥಮಿಕ ಹಂತದಲ್ಲಿಯೇ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ವಿದ್ಯಾರ್ಥಿಗೆ ನ್ಯಾಯ ಒದಗಿಸಬೇಕು. ಆರೋಪಿತ ಮೇಲ್ವಿಚಾರಕ ಮನೋಹರ್ ಅವರನ್ನು ತಕ್ಷಣ ಅಮಾನತುಗೊಳಿಸಿ, ತನಿಖೆ ಪೂರ್ಣಗೊಳ್ಳುವವರೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಶಾಲೆಯಲ್ಲಿರುವ ಎಲ್ಲ ವಿದ್ಯಾರ್ಥಿಗಳ ಸುರಕ್ಷತೆ, ಆಹಾರ, ವಸತಿ ಹಾಗೂ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಬೇಕು. ಮಕ್ಕಳಿಗೆ ಜಾತಿ ತಾರತಮ್ಯ, ದ್ವೇಷ ಮತ್ತು ಮಾನಸಿಕ ಕಿರುಕುಳ ನೀಡುವ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲೆಯ ಆಡಳಿತ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ವಿದ್ಯಾರ್ಥಿಗಳಿಗೆ ಭಯಮುಕ್ತ ವಾತಾವರಣ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಪ್ರಕರಣದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಹಕ್ಕು ಮತ್ತು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸುಳ್ಳು ದಾಖಲೆ ಸೃಷ್ಠಿಸಿ ವಕ್ಫ ಜಾಗ ಮಾರಾಟ; ಅಕ್ಬರ್ ನಾಗುಂಡಿ
ಜಿಲ್ಲಾ ಉಪಾಧ್ಯಕ್ಷ ಭಾಶ ಶ್ಯಾನೇರ, ಜಿಲ್ಲಾ ಕಾರ್ಯದರ್ಶಿ ಪವನ ಕಮದಳ, ಸಂತೋಷ ತ್ಯಾಪ್ಲಿ ಇನ್ನಿತರರು ಇದ್ದರು.




