ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ನಡೆದಿದ್ದು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಯಾದಗಿರಿ ಜಿಲ್ಲೆಯ ಸೈದಾಪುರ ಸಮೀಪದ ಕೂಡ್ಲೂರು ಗ್ರಾಮದ ಮಹೇಶ್ವರಿ ಎಂಬ ಮಹಿಳೆ ಅಕ್ಟೋಬರ್ 9 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಒಪೆಕ್ ಆಸ್ಪತ್ರೆಗೆ ದಾಖಲಾಗಿದ್ದರು.
ರಸ್ತೆ ಅಪಘಾತದಲ್ಲಿ ಮಹಿಳೆಯ ತಲೆಗೆ ಗಾಯವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಬ್ಯಾಂಡೇಜ್ ಹಾಕಿ ಚಿಕಿತ್ಸೆ ನೀಡಿದ್ದರು. ಬಳಿಕ ಮಹಿಳೆಯನ್ನು (ಐಸಿಯು) ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಮೂರು ದಿನಗಳು ಕಳೆದರೂ ತಲೆಯ ಗಾಯಕ್ಕೆ ಸಮರ್ಪಕವಾಗಿ ಡ್ರೆಸ್ಸಿಂಗ್ ಮಾಡಿಲ್ಲ ಹಾಗೂ ಬ್ಯಾಂಡೇಜ್ ಬದಲಾಯಿಸಿಲ್ಲ ಎಂದು ಆರೋಪಿಸಲಾಗಿದೆ.
ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ನೀಡಬೇಕಾದ ಆಸ್ಪತ್ರೆಯಲ್ಲೇ ಇಂತಹ ಘಟನೆ ನಡೆದಿರುವುದಕ್ಕೆ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ
ಘಟನೆ ಹಿನ್ನೆಲೆಯಲ್ಲಿ ವೈದ್ಯ ಹರೀಶ್ ಹಾಗೂ ಸಂಬಂಧಿಸಿದ ಸಿಬ್ಬಂದಿಯ ವಿರುದ್ಧ ಆಸ್ಪತ್ರೆಯ ಆಡಳಿತ ಮಂಡಳಿ ಅಸಮಾಧಾನ ವ್ಯಕ್ತಪಡಿಸಿದ್ದು, ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡುವ ಭರವಸೆ ನೀಡಿದೆ





