ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನಗರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಅವರ ಮೇಲೆ ನ.21ರಂದು ಸಂಜೆ ನಗರದ ಐ.ಬಿ. ರಸ್ತೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಷೀರುದ್ದೀನ್ ಅವರ ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾ ವಕ್ಸ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಸೈಯದ್ ಯಾಸೀನ್ ಅವರ ಬೆಂಬಲಿಗರಾಗಿರುವ ರಸೂಲ್ ಸಾಬ್ ಅವರ ಪುತ್ರ ಜಾಫರ್ ಅಹ್ಮದ್, ನಗರದ ಐ.ಬಿ. ರಸ್ತೆಯ ರಾಮಲಿಂಗೇಶ್ವರ ದೇವಸ್ಥಾನದ ಮುಂಭಾಗ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರನ್ನು ತಡೆದು ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಾಧ್ಯಮಗಳಲ್ಲಿ ರಾಜಕೀಯ ವಿಚಾರವಾಗಿ ನೀಡಿದ್ದ ಹೇಳಿಕೆಯನ್ನು ಪ್ರಶ್ನಿಸಿ, ಆರೋಪಿಗಳು ಬಡಿಗೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯ ಬಳಿಕ ಜಾಫರ್ ಅಹ್ಮದ್ ಅವರನ್ನು ನಗರದ ಓಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೂರಿನ ಮೇರೆಗೆ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಪಟ್ಟ, ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ
ಮೆಹಬೂಬ್, ಮುಹಮ್ಮದ್, ಅಲ್ಲಾವುದ್ದೀನ್, ತಿಮ್ಮಪ್ಪ ಹಾಗೂ ಬಡೇಸಾಬ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



