ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸಯ್ಯದ್ ಯಾಸೀನ್ ಅವರು ರಾಯಚೂರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದಿಂದ ಎರಡು ಬಾರಿ 1999 ಹಾಗೂ 2008 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಹಾಗೂ ಶಾಸಕರಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಅನೇಕ ಗಣ್ಯರು ಅವರ ನಿವಾಸಕ್ಕೆ ಹಾಗೂ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿದ್ದು, ಅವರ ಅಗಲಿಕೆಯಿಂದ ಜಿಲ್ಲೆಯ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಧಾನಸಭೆ ಚುನಾವಣೆ-2028: ಮಾನ್ವಿ–ದೇವದುರ್ಗದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕದನ, ಕಾಂಗ್ರೆಸ್‌ಗೆ ಲಾಭವೇ?
ಸಯ್ಯದ್ ಯಾಸೀನ್ ಅವರ ಅಂತ್ಯಕ್ರಿಯೆ ಇಂದು ಸಂಜೆ ರಾಯಚೂರು ನಗರದ ಕಮಲಿವಾಲೆ ಬಾಬಾ ಖಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಕ ತಿಳಿದುಬಂದಿದೆ.




