ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಷ್ಟ್ರ ರಕ್ಷಣೆ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ಅವರಿಗೆ ಜೂನ್ 9ರಿಂದ 11ರವರೆಗೆ ಜಿಲ್ಲೆಯ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪೂವಿತಾ ಎಸ್. ಆದೇಶ ಹೊರಡಿಸಿದ್ದಾರೆ.
ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಪುನೀತ್ ಕೆರೆಹಳ್ಳಿಯವರನ್ನು ಆಹ್ವಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಆಡಳಿತ ಈ ಆದೇಶ ಜಾರಿಗೊಳಿಸಿದೆ.
ಹಟ್ಟಿ ಕ್ಯಾಂಪ್ ಹಾಗೂ ಹಟ್ಟಿ ಪಟ್ಟಣ ಪ್ರದೇಶಗಳಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಸಾಗಿಸುತ್ತಿದ್ದು, ಕಾರ್ಯಕ್ರಮದ ವೇಳೆ ಯಾವುದೇ ರೀತಿಯ ಮತೀಯ ಉದ್ವಿಗ್ನತೆ ಅಥವಾ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೊಹರಂ ಪ್ರಯುಕ್ತ ಬೀದಿದೀಪ, ಸಿಸಿ ಕ್ಯಾಮರಾ ಅಳವಡಿಕೆಗೆ ಡಿವೈಎಫ್ಐ ಆಗ್ರಹ
ರಾಜ್ಯಾದ್ಯಂತ ಅನೇಕ ಪ್ರಕರಣಗಳು ದಾಖಲಾಗಿವೆ. ಉದ್ರೇಕಕಾರಿ ಭಾಷಣದಿಂದ ಸಾರ್ವಜನಿಕವಾಗಿ ಶಾಂತಿ ಸುವ್ಯವಸ್ಥೆ ಧಕ್ಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ





