ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಪ್ರಾರಂಭವಾಗಿರುವ ಜನತಾ ದರ್ಶನ ತಾಲೂಕು ಕೇಂದ್ರಗಳಲ್ಲಿಯೂ ವಿಸ್ತಾರವಾಗಲಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟಿಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆಗಳ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಸಾರ್ವಜನಿಕರ ದೂರುಗಳನ್ನು ಪಡೆದ ಆಧ್ಯತೆ ಮೇಲೆ ಪರಿಹಾರಿಸಲಾಗುತ್ತದೆ. ಪ್ರತಿ ದೂರಿಗೆ ಸಂಖ್ಯೆ ನೀಡಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ” ಎಂದು ಹೇಳಿದರು.
ಶಾಸಕ ದದ್ದಲ್ ಬಸನಗೌಡ ಮಾತನಾಡಿ, “ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಲ್ಕು ತಿಂಗಳು ಕಳೆಯುವಷ್ಟರಲ್ಲಿಯೇ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಈಗಾಗಲೇ ಜಾರಿಗೊಂಡಿದ್ದು, ಸಿದ್ದರಾಮಯ್ಯ ಮತ್ತು ಡಿ ಕೆ ಶಿವುಕುಮಾರ್ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ. ಇದೀಗ ಜನರ ಬಳಿಗೆ ಬಂದು ಸಮಸ್ಯೆ ನಿವಾರಿಸಲು ಜನತಾ ದರ್ಶನ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಪ್ರತಿ ತಿಂಗಳಿಗೊಮ್ಮೆ ಆಡಳಿತವೇ ನಿಮ್ಮ ಬಳಿ ಬಂದು ಸಮಸ್ಯೆಗಳನ್ನು ನಿವಾರಿಸುತ್ತದೆ” ಎಂದು ತಿಳಿಸಿದರು.
“ರಾಜ್ಯದಲ್ಲಿ ಬರ ಆವರಿಸಿದ್ದು ಪರಿಹಾರೋಪಾಯಗಳನ್ನು ಜಾರಿಗೊಳಿಸಲಾಗುತ್ತದೆ. ಅಧಿಕಾರಿಗಳು ಜನರು ನೀಡುವ ದೂರುಗಳನ್ನು ಪರಿಹರಿಸುವ ಮೂಲಕ ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸಮಾಡಬೇಕು” ಎಂದರು.
ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, “ರಾಜ್ಯದ 30 ಜಿಲ್ಲೆಗಳಲ್ಲಿ ಒಂದೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಜನತೆ ಆಶೋತ್ತರಗಳಿಗೆ ಪರಿಹಾರ ಒದಗಿಸುವ ಪ್ರಯತ್ನವನ್ನು ಸರ್ಕಾರ ಪ್ರಾರಂಭಿಸಿದೆ. ನಾಲ್ಕು ತಿಂಗಳಲ್ಲಿ ಅನೇಕ ಜನಪರವಾದ ನಿರ್ಧಾರಗಳನ್ನು ಸರ್ಕಾರ ಕೈಗೊಂಡಿದೆ. ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಜನತಾ ದರ್ಶನ ಪರಿಹಾರವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ರಾಜ್ಯದಲ್ಲಿ ಕಾವೇರಿ ನೀರಿನ ಸಮಸ್ಯೆ ಹೊತ್ತಿ ಉರಿಯುತ್ತಿದೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿಯೇ ಅದೇ ಸ್ಥಿತಿಯಿದೆ. ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರು ಕೂಡಲೇ ಕ್ರಮಕ್ಕೆ ಮುಂದಾಗದಿದ್ದಲ್ಲಿ ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲೂ ಹೊತ್ತಿ ಉರಿಯುವ ಸಾಧ್ಯತೆಗಳಿವೆ. ಕೂಡಲೇ ನೀರಿನ ಸಮಸ್ಯೆ ನಿವಾರಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಕ್ಟೋಬರ್ 4ರಂದು ವಿಧಾನಸೌಧಕ್ಕೆ ಮುತ್ತಿಗೆ: ರಾಜ್ಯ ರೈತ ಸಂಘ
ಸರ್ಕಾರ 22 ಇಲಾಖೆಗಳ ಕೇಂದ್ರಗಳನ್ನು ಸ್ಥಾಪಿಸಿದ್ದು, ಸಾರ್ವಜನಿಕರು ಇಲಾಖಾವಾರು ನೀಡಿರುವ ದೂರುಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಂದ ಸ್ಥಳದಲ್ಲಿಯೇ ಉತ್ತರ ಕೊಡಿಸಲಾಯಿತು.
ವೇದಿಕೆಯಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರು, ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ವಸಂತಕುಮಾರ ಸೇರಿದಂತೆ ಪ್ರಭಾರಿ ಜಿಲ್ಲಾಧಿಕಾರಿ ರಾಹುಲ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಇದ್ದರು.
ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು