ರಾಯಚೂರು ಗ್ರಾಮೀಣ ಗುಂಜಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ, ಮೃತದೇಹವನ್ನು ನೀರಿನಲ್ಲೇ ಹೊತ್ತುಕೊಂಡು ಹೋಗಿ ಅಂತ್ಯಸಂಸ್ಕಾರ ನೆರವೇರಿಸಿದ್ದು ಘಟನೆ ನಡೆದಿದೆ.
ಗ್ರಾಮದಲ್ಲಿ ಮೃತರ ಅಂತ್ಯ ಸಂಸ್ಕಾರ ಮಾಡಲು ಮೃತದೇಹವನ್ನು ತೆಪ್ಪದಲ್ಲಿ ತೆಗೆದುಕೊಂಡು ಅಂತ್ಯ ಸಂಸ್ಕಾರ ಮಾಡಬೇಕಿದೆ. ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮೃತರ ಅಂತ್ಯ ಸಂಸ್ಕಾರಕ್ಕಾಗಿ ಮಳೆ ನೀರು ತುಂಬಿ ಹರಿಯುತ್ತಿರುವ ದಾರಿಯಲ್ಲಿ ಶವವನ್ನು ಹೊತ್ತು ಸಾಗಬೇಕಾದ ಪರಿಸ್ಥಿತಿ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ
ಸ್ಥಳೀಯ ನಿವಾಸಿ ಮಾಹಿತಿ ನೀಡಿ, ಸುಮಾರು 20 ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಯಾವುದೇ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಆರೋಪಿಸಿದರು.
ಮಳೆಗಾಲದಲ್ಲಿ ಸ್ಮಶಾನಕ್ಕೆ ತೆರಳುವುದು ಇನ್ನಷ್ಟು ದುಸ್ತರವಾಗಿದ್ದು, ಮೃತರ ಕುಟುಂಬದವರು ಹಾಗೂ ಗ್ರಾಮಸ್ಥರು ಜೀವದ ಹಂಗು ತೊರೆದು ನೀರಿನಲ್ಲೇ ನಡೆದು ಅಂತ್ಯಸಂಸ್ಕಾರ ನೆರವೇರಿಸಬೇಕಾಗಿದೆ ಎಂದು ಸ್ಥಳೀಯರು ಆಕ್ರೋಶಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆದ್ದಾರಿ ಕಾಮಗಾರಿಗೆ ಸರ್ವಿಸ್ ರಸ್ತೆಗೆ ರೈತರ ಆಗ್ರಹ: ಪೊಲೀಸ್ ಬಂದೋಬಸ್ತ್
ಕೂಡಲೇ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆ ನಿರ್ಮಿಸಿ ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಸರ್ಕಾರವನ್ನು ಒತ್ತಾಯಿಸಿದ್ದಾರೆ.





