ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ತೀವ್ರ ಬರಗಾಲದ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ ಹಾಲು, ಮೊಸರು, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹಾಗೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೊರಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಪ್ರತಿ ಹಂತಕ್ಕೆ 9ರೂ ಹೆಚ್ಚಳ ಮಾಡಿದ್ದು, ಕಳೆದ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದೆ. ಮತ್ತೊಂದೆಡೆ ಅಕ್ಕಿ ಬೇಳೆ ಸೇರಿದಂತೆ ಅಗತ್ಯ ಆಹಾರ ಧಾನ್ಯಗಳ ಬೆಲೆಯೂ ಏರಿಕೆಯಾಗಿದ್ದು, ಆರ್ಥಿಕ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಳಸಂತೆಕೋರರ ಹಾವಳಿಯನ್ನು ನಿಯಂತ್ರಿಸುವಲ್ಲಿಯೂ ಸರಕಾರಗಳು ವಿಫಲವಾಗಿವೆ, ಹಾಲು ಉತ್ಪಾದಕರ ಹಿತಾಸಕ್ತಿ ಕಾಪಾಡುವುದಕ್ಕೆ ಸಿಪಿಐಎಂ ಬೆಂಬಲವಿದೆ. ಆದರೆ, ಉತ್ಪಾದಕರಿಗೆ ನೆರವಾಗುವ ನೆಪದಲ್ಲಿ ಬಡ ಗ್ರಾಹಕರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ. ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 8ರೂ. ಸಹಾಯಧನ ನೀಡಬೇಕು ಎಂದು ಮನವಿ ಮಾಡಿದರು.
ಪಶು ಆಹಾರ ಸೇರಿದಂತೆ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಸಹಾಯಧನ ಒದಗಿಸಬೇಕು. ಡೈರಿ, ಚಿಲ್ಲಿಂಗ್ ಕೇಂದ್ರ ಹಾಗೂ ಹಾಲು ಒಕ್ಕೂಟಗಳಲ್ಲಿನ ಭ್ರಷ್ಟಾಚಾರ ಮತ್ತು ಸೋರಿಕೆ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೂ ತತ್ವಾರ; ರೋಗಿಗಳ ಪರದಾಟ!
ಈ ವೇಳೆ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ, ತಾಲೂಕು ಕಾರ್ಯದರ್ಶಿ ಹೆಚ್. ಪದ್ಮಾ ಡಿ.ಎಸ್. ಶರಣಬಸವ, ಕೆ. ಮಲ್ಲೇಶಪ್ಪ ಬಸವಂತರಾಯ ಗೌಡ, ನರಸಣ್ಣ ನಾಯಕ, ಹನುಮಂತ ಮಡಲಗುಂಡಾ, ಗೋಕಾರಮ್ಮ ನಿರ್ಮಲ, ನರಸಮ್ಮ ಸುಜಾತ, ನರಸಿಂಹಲು, ಮಾರೆಪ್ಪ ಮಹಾದೇವಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




