ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ೧೭ ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಸೇರಿದಂತೆ ಒಟ್ಟು ಸುಮಾರು ೩೬ ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಈಗಾಗಲೇ ಟಿಇಟಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಂತರಿಕ ಮೀಸಲಾತಿ ವಿಚಾರದಲ್ಲಿ ಉಂಟಾದ ಗೊಂದಲದಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ಶಿಕ್ಷಕರ ಕೊರತೆ ಹೆಚ್ಚಿರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಗಾರಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ವಿಧಾನ, ಉತ್ತಮ ಫಲಿತಾಂಶ ಪಡೆಯುವ ತಂತ್ರಗಳು ಹಾಗೂ ಕಲಿಕೆಯಲ್ಲಿ ಸುಧಾರಣೆ ತರುವ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ನೀಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗಿಂತ ಶೇ.೦.೨ರಷ್ಟು ಉತ್ತಮ ಫಲಿತಾಂಶ ದಾಖಲಿಸಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮದ ಆಯ್ಕೆ ಲಭ್ಯವಾಗಲಿದೆ. ಇದು ಕಡ್ಡಾಯವಲ್ಲ. ಪೋಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಇಚ್ಛೆಯಂತೆ ಮಾಧ್ಯಮ ಆಯ್ಕೆ ಮಾಡಿಕೊಳ್ಳಬಹುದು. ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ಪ್ರಕ್ರಿಯೆಯೂ ನಡೆಯುತ್ತಿದೆ. ಈಗಾಗಲೇ ೧೮ರಿಂದ ೧೯ ಜಿಲ್ಲೆಗಳಲ್ಲಿ ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆಗೆ ಸಂಬಂಧಿಸಿದ ಮಾತನಾಡಿದ ಅವರು, ಮುಂದಿನ ಜೂನ್ ೧ರಿಂದ ಹಂತ ಹಂತವಾಗಿ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು. ಎಡಿಬಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಅಕ್ಷರ ಆವಿಷ್ಕಾರ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಅನುದಾನದಡಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಇದಕ್ಕಾಗಿ ಐದು ಹಾಗೂ ಏಳು ಕಿಲೋಮೀಟರ್ ವ್ಯಾಪ್ತಿಯ ಸಾರಿಗೆ ವ್ಯವಸ್ಥೆ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ೨೫ ಸಾವಿರ ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಮಾಡಿ ಮುಚ್ಚಲಾಗುತ್ತದೆ ಎಂಬ ವರದಿಗಳಲ್ಲಿ ಸತ್ಯಾಂಶವಿಲ್ಲ. ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕಿಲ್ಲ. ಒಂದೇ ಆವರಣದಲ್ಲಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ದೊರೆತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಸಂಗೀತ ಮತ್ತು ನಾಟಕ ಶಿಕ್ಷಕರನ್ನು ಒಳಗೊಂಡಂತೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಕೆಪಿಎಸ್ ಶಾಲೆಗಳ ಉದ್ದೇಶವಾಗಿದೆ. ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ ೧೨ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಿಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷ ಪಿಯುಸಿ ತರಗತಿಗಳಿಗೆ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರಿಂದ ಪಠ್ಯಪುಸ್ತಕಗಳ ಕೊರತೆ ಎದುರಾಗಿತ್ತು. ಮುಂದಿನ ವರ್ಷ ಇಂತಹ ಸಮಸ್ಯೆ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಧ್ಯಾಹ್ನದ ಬಿಸಿಯೂಟಕ್ಕೆ ಅಕ್ಕಿ ಸೇರಿದಂತೆ ಆಹಾರ ಪದಾರ್ಥಗಳ ಪೂರೈಕೆಯಲ್ಲಿ ಹಣದ ಕೊರತೆಯಿಂದ ಸಮಸ್ಯೆಯಾಗಿಲ್ಲ. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ವಿಳಂಬವಾದ ಹಿನ್ನೆಲೆಯಲ್ಲಿ ಒಂದೂವರೆ ತಿಂಗಳಿಂದ ಎರಡು ತಿಂಗಳವರೆಗೆ ಹಣ ಪಾವತಿಯಲ್ಲಿ ವಿಳಂಬವಾಗಿರುವುದು ನಿಜ. ಆದರೆ ಇಲಾಖೆಯಲ್ಲಿ ಅನುದಾನದ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು.
ಆಂಧ್ರಪ್ರದೇಶ ಮತ್ತು ತೆಲಂಗಾಣ ಗಡಿಭಾಗದ ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡದಿರುವುದು ಹಾಗೂ ಎಸ್‌ಎಸ್‌ಎಲ್‌ಸಿ ನಂತರ ಕರ್ನಾಟಕದ ಪಿಯುಸಿ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಶಾಲೆಗಳಲ್ಲಿ ಸಿಬ್ಬಂದಿ ನೇಮಕಾತಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ಗಳು ಹಣ ಸಂಗ್ರಹಿಸುತ್ತಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ದೂರು ನೀಡಿದರೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಹಣ ದುರುಪಯೋಗವಾಗಲು ಅವಕಾಶ ನೀಡುವುದಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೊಹ್ಮದ್ ಶಾಲಂ, ಶ್ರೀನಿವಾಸರೆಡ್ಡಿ ಸೇರಿದಂತೆ ಅನೇಕರಿದ್ದರು.



