ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಹಾಗೂ ಓಪೆಕ್ ಆಸ್ಪತ್ರೆಗಳ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಬೆಳಕಿಗೆ ಬಂದಿದೆ. ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವೇತನ ಪಾವತಿಸಲು ಆರ್ಥಿಕ ಮುಗ್ಗಟ್ಟು ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಿಮ್ಸ್‌ನಲ್ಲಿ ಸುಮಾರು 80ಕ್ಕೂ ಅಧಿಕ ಸಿಬ್ಬಂದಿ ಸೇರಿದಂತೆ ರಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೂ ಮೂರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ವೇತನಕ್ಕಾಗಿ ಕಾಯುತ್ತಿರುವ ಸಿಬ್ಬಂದಿ ಇದೀಗ ಸರ್ಕಾರದ ಭರವಸೆಯ ನಿರೀಕ್ಷೆಯಲ್ಲಿದ್ದಾರೆ.
ಅನುದಾನ ಬಿಡುಗಡೆಯಲ್ಲಿ ವಿಳಂಬವಾಗಿರುವುದರಿಂದ ರಿಮ್ಸ್ ಮಾತ್ರವಲ್ಲದೆ ಹಾವೇರಿ ಸೇರಿದಂತೆ ರಾಜ್ಯದ ಹಲವು ವೈದ್ಯಕೀಯ ಸಂಸ್ಥೆಗಳಲ್ಲೂ ಸಿಬ್ಬಂದಿ ವೇತನ ಪಾವತಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ಮಾಸಿಕ ವೇತನ ಪಾವತಿಗೆ ಕಂತಿನ ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಬಳಕೆ ಪ್ರಮಾಣ ಪತ್ರದೊಂದಿಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯಬೇಕು. ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದಿರುವ ಸಿಬ್ಬಂದಿಗೆ ಮಾತ್ರ ವೇತನ ಪಾವತಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.
ಅನುಮೋದನೆ ಇಲ್ಲದೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿಕೊಂಡು ವೇತನ ಪಾವತಿಸಿದರೆ ಸಂಬಂಧಿಸಿದ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ನೀಡಿದೆ.
ಕರ್ನಾಟಕ ಆರ್ಥಿಕ ಸಂಹಿತೆಯನ್ವಯ ಯಾವ ಉದ್ದೇಶಕ್ಕಾಗಿ ಅನುದಾನ ಮಂಜೂರಾಗಿದೆಯೋ ಅದೇ ಉದ್ದೇಶಕ್ಕೆ ಅನುದಾನ ಬಳಕೆ ಮಾಡಿಕೊಂಡು ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ವಾರ್ಷಿಕ ಅನುದಾನ ಬೇಡಿಕೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಸೂಚಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ: ನ್ಯಾಯಾಲಯದ ಆದೇಶದ ಮೇರೆಗೆ ಎಸ್‌ಡಿಎಂ ಕಚೇರಿ ಪೀಠೋಪಕರಣ, ಕಂಪ್ಯೂಟರ್ ಜಪ್ತಿ
ಈ ನಡುವೆ, ಅನುಮೋದನೆ ಪಡೆದಿರುವ ಸಿಬ್ಬಂದಿಗೆ ವೇತನ ಬಿಡುಗಡೆಯಾಗದೇ ಇರುವಾಗ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿಕೊಂಡಿರುವುದು ಮತ್ತೊಂದು ಸಮಸ್ಯೆಗೆ ಕಾರಣವಾಗಿದೆ. ಮೂರು ತಿಂಗಳ ವೇತನ ಬಾಕಿ ಇರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂಬ ನಿರೀಕ್ಷೆಯಲ್ಲಿದ್ದಾರೆ.




