ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಸ್‌ಡಿಎಂಸಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಎಲ್‌ಐಸಿ, ಎಚ್‌ಎಫ್‌ಎಲ್ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಸರ್ಕಾರಿ ಶಾಲೆ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಪಾತ್ರ, ಜವಾಬ್ದಾರಿ ಮತ್ತು ಕರ್ತವ್ಯಗಳು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಹಂತದಲ್ಲಿ ಆಡಳಿತ ನಿರ್ವಹಣೆಯ ಜತೆಗೆ ಶಾಲೆಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ಸಮುದಾಯದ ಸಹಕಾರದೊಂದಿಗೆ ಒದಗಿಸಿ, ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಎಸ್‌ಡಿಎಂಸಿಗಳಿಗೆ ಗುರುತರ ಜವಾಬ್ದಾರಿ ಇದೆ. ಇದನ್ನು ಅರಿತು ಸಮಿತಿಗಳು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ನಂತರ ಮಾತನಾಡಿದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಸಂಸ್ಥಾಪಕ ಗೌರವಾಧ್ಯಕ್ಷ ಡಾ. ಬಿ.ಪಿ. ನಿರಂಜನ ಆರಾಧ್ಯ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಡಿಪಿಇಪಿ, ಸರ್ವ ಶಿಕ್ಷಣ ಅಭಿಯಾನ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಿದೆ ಎಂದರು.
ಎಸ್‌ಡಿಎಂಸಿ ಸದಸ್ಯರು ಸರ್ಕಾರಿ ಶಾಲೆಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ಹಾಗೂ ಶಾಲಾ ಆಡಳಿತದ ಕುರಿತು ಸಮಗ್ರವಾಗಿ ಅರಿತುಕೊಂಡು ಪಂಚಾಯಿತಿಗಳ ಸಹಕಾರ ಪಡೆದು ಉತ್ತಮ ಶಾಲೆಗಳನ್ನು ನಿರ್ಮಿಸಲು ಸರ್ಕಾರದೊಂದಿಗೆ ಸಮನ್ವಯ ಸಾಧಿಸಬೇಕು. ಸರ್ಕಾರಿ ಶಾಲೆಗಳು ಕೇಂದ್ರೀಯ ವಿದ್ಯಾಲಯ ಹಾಗೂ ನವೋದಯ ವಿದ್ಯಾಲಯಗಳ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಹಿನ್ನಡೆ ಅನುಭವಿಸುತ್ತಿರುವುದು ಕಂಡುಬರುತ್ತಿದೆ. ಶಾಲೆಗಳ ಮೂಲ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಜತೆಗೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಚರ್ಚಿಸಿ ಶಾಲೆಗಳನ್ನು ಗುಣಮಟ್ಟದ ಶಿಕ್ಷಣದತ್ತ ಕೊಂಡೊಯ್ಯಲು ಶ್ರಮಿಸಬೇಕು ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದೇ ಸರ್ಕಾರದ ಗುರಿ: ಅಜಯ ಸಿಂಗ್
ವೇದಿಕೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಕಾರ್ಯದರ್ಶಿ ಶುಭಂಕರ್, ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಸಂಚಾಲಕಿ ವಿರೂಪಮ್ಮ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ವ್ಯವಸ್ಥಾಪಕ ಸುರೇಶ್ ಹಾಗೂ ಕೊಪ್ಪಳ ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ದೇವರಾಜ್ ಕಿನ್ನಾಳ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು





