ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು. ಇಲ್ಲವಾದಲ್ಲಿ ನೀರಿನ ಕೊರತೆಯಿಂದ ಹಾನಿಗೊಳಗಾಗುವ ಬೆಳೆಗಳಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಸಿಂಧನೂರು ಬಂದ್ ಬುಧವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುಂಗಭದ್ರಾ ಜಲಾಶಯ ರೈತರ ಒಕ್ಕೂಟ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆದ ಬಂದ್‌ಗೆ ನಗರದ ವ್ಯಾಪಾರಸ್ಥರು, ರೈತರು ಹಾಗೂ ಸಾರ್ವಜನಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಬಂದ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂಗಡಿ-ಮುಂಗಟ್ಟುಗಳು ಮುಚ್ಚಿದ್ದವು.
ಸರ್ಕಾರದ ವಿರುದ್ಧ ರೈತರ ಆಕ್ರೋಶ
ರೈತರ ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಎರಡು ದಿನಗಳಿಂದ ಮಿನಿ ವಿಧಾನಸೌಧದ ಕಚೇರಿ ಮುಂಭಾಗದಲ್ಲಿ ರೈತರು ಉಪವಾಸ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರೂ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕರಾದ ಬಸವರಾಜ ಗೋಡಿಹಾಳ ಹಾಗೂ ನಿರುಪಾದಿ ಕೆ. ಗೋಮರ್ಸಿ ಆರೋಪಿಸಿದರು.

ಎಡದಂಡೆ ನಾಲೆಗೆ ಸಮರ್ಪಕವಾಗಿ ನೀರು ಹರಿಸದಿದ್ದರೆ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಹಾನಿಗೊಳಗಾಗುವ ಆತಂಕವಿದೆ. ಈಗಾಗಲೇ ರೈತರು ಕೃಷಿ ಚಟುವಟಿಕೆಗಳಿಗೆ ಅಪಾರ ಹಣ ಖರ್ಚು ಮಾಡಿದ್ದಾರೆ. ನೀರಿನ ಅಭಾವದಿಂದ ಬೆಳೆ ಹಾನಿಯಾದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಮುಖಂಡರು ಹೇಳಿದರು.
ರೈತರ ಹಿತದೃಷ್ಟಿಯಿಂದ ಡಿಸೆಂಬರ್ 31ರವರೆಗೆ ಎಡದಂಡೆ ನಾಲೆಗೆ ನೀರು ಹರಿಸುವ ಕುರಿತು ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಬೆಳೆ ನಷ್ಟ ಅನುಭವಿಸುವ ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ಹೋರಾಟ ತೀವ್ರಗೊಳಿಸುವ ಎಚ್ಚರಿಕೆ :
ರೈತರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಬಂದ್ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.



