ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪದಲ್ಲಿ ರೈತರ ಮೇಲೆ ಗುಂಡು ಹಾರಿಸಿ ದೌರ್ಜನ್ಯ ಮಾಡಿರುವ ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಕಣಗಾನಕೊಪ್ಪದಲ್ಲಿ ಗಣಿಗಾರಿಕೆಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ನೂರಾರು ರೈತರು, ರೈತನ ಕಾಲಿಗೆ ಗುಂಡು ಹೊಡೆದು, ಹಲ್ಲೆ ನಡೆಸಿರುವ ಆರೋಪಿ ಸಕಲೇಶ್‌ನಿಗೆ ಕಠಿಣಾತಿ ಕಠಿಣ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ಈ ಪ್ರಕರಣವನ್ನು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ರಾಜಕೀಯ ಒತ್ತಡಗಳಿಗೆ ಮಣೆಯದೆ ಆರೋಪಿತರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು. ಈ ಮೂಲಕ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಆವಲಗುರ್ಕಿ ಬಳಿಯ ಇಶಾ ಫೌಂಡೇಶನ್‌ನಲ್ಲಿ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಿಸಿ, ಅಕ್ರಮವಾಗಿ ಟೋಲ್ ವಸೂಲಿ ಮಾಡಲಾಗುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಅಕ್ರಮ ರಸ್ತೆಯನ್ನು ತೆರವುಗೊಳಿಸುವ ರೈತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರು, ಕಣಗಾನಕೊಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಶಾ ಫೌಂಡೇಶನ್ ಬಳಿ ನಿರ್ಮಿಸಿರುವ ಅಕ್ರಮ ರಸ್ತೆ ಟೋಲನ್ನು ತೆರವುಗೊಳಿಸುವಂತೆ ಕೂಡಲೇ ತಹಶೀಲ್ದಾರ್ ಮತ್ತು ಎಸಿ ಅವರಿಗೆ ಸೂಚನೆ ಕೊಡಲಾಗುವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರೈತ ಸಂಘ ಜಿಲ್ಲಾಧ್ಯಕ್ಷ ರಾಮನಾಥರೆಡ್ಡಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕಾರ್ಯದರ್ಶಿ ಮುನಿನಂಜಪ್ಪ, ರಾಮಾಂಜಿನಪ್ಪ, ರಘುನಾಥ್ ರೆಡ್ಡಿ, ನರಸಿಂಹಪ್ಪ ಸೇರಿದಂತೆ ಇತರೆ ರೈತರು ಹಾಜರಿದ್ದರು.