ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.
ಬಿಜೆಪಿ ನಗರ ಘಟಕದ ಮುಖಂಡನ ವಿಚಾರಣೆ ನಡೆದಿದ್ದು, ಈತ ಸ್ಫೋಟ ಪ್ರಕರಣದಲ್ಲಿ ಶಂಕಿತರಾಗಿರುವ ವ್ಯಕ್ತಿಗಳ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಕಳೆದ 10 ದಿನದ ಹಿಂದೆ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುವ ಇಬ್ಬರು ಯುವಕರಿಗೆ ಸಂಬಂಧಿಸಿದ ಹಲವು ಅಂಗಡಿ ಹಾಗೂ ಮನೆಗಳ ಮೇಲೆ ದಾಳಿ ಮಾಡಿದ್ದರು. ಈ ಬೆನ್ನಲ್ಲೇ ಇದೀಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್‌ಐಎ ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮಾ.1 ರಂದು ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಅಲ್ಲಿದ್ದ ಒಂಭತ್ತು ಜನರು ಗಾಯಗೊಂಡಿದ್ದರು. ಇದರ ತನಿಖೆ ನಡೆಯುತ್ತಿದ್ದು, ಇದೀಗ ಬಿಜೆಪಿ ಮುಖಂಡನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿರುವುದು ಹೊಸ ಬೆಳವಣಿಗೆಯಾಗಿದೆ.
