ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಸೇರಿದಂತೆ
ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಇಚ್ಚಿಸಿದಲ್ಲಿ ಸೂಕ್ತ ಮಾರ್ಗದರ್ಶನ ಸಿಗಲಿದೆ.
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜಿ, ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ರಾಜಿ, ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕ ಪೂರ್ಣವಾಗಿ ಮರು ಪಾವತಿಯಾಗಲಿದೆ.
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಿರುವ ವ್ಯವಸ್ಥೆ ಇದಾಗಿದೆ.
ಮಾರ್ಚ್ 8 ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು, ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ಗ್ಯಾರೆಂಟಿ ಯೋಜನೆಗಳಿಗೆ ದಲಿತರ ದುಡ್ಡೇ ಬೇಕಾ; ದಸಂಸ
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಪರ್ಕ ಸಂಖ್ಯೆ 08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾಹಿತಿ ನೀಡಿರುತ್ತಾರೆ.
