ಚಾಮರಾಜನಗರ ಜಿಲ್ಲೆ, ಕೊಳ್ಳೆಗಾಲ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎ. ಆರ್. ಕೃಷ್ಣಮೂರ್ತಿ ಸಾವಿತ್ರಿಬಾಯಿ ಫುಲೆ ನೆನಿಪಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಹೇಳಿದರು.
“ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರನ್ನು ನೆನಪಿಸಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಕೊಟ್ಟು ಸುಸಂಸ್ಕೃತರನ್ನಾಗಿ ಮಾಡಿ, ದೇಶಕ್ಕೆ ಉತ್ತಮ ಪ್ರಜೆಯನ್ನಾಗಿ ರೂಪಿಸುವ ಶಿಕ್ಷಕರ ಶ್ರಮ ಅಪಾರವಾದದ್ದು. ಶಿಕ್ಷಕರು ತಪ್ಪು ಮಾಡಿದರೆ ಸಮಾಜ ದಾರಿ ತಪ್ಪುತ್ತದೆ. ಶಿಕ್ಷಕರು ಜವಾಬ್ದಾರಿಯುತವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದು ತಿಳಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಎಲ್ಲ ಸಮುದಾಯದ ಹೆಣ್ಣು ಮಕ್ಕಳಿಗೆ ಶಿಕ್ಷಣದ ಹಕ್ಕುಗಳನ್ನು ನೀಡಿ, ಸಮಾನ ಅವಕಾಶಗಳನ್ನು ಕಲ್ಪಿಸಿ ಕೊಟ್ಟಿದ್ದಾರೆ. ಆದ್ದರಿಂದ, ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಜೀವನ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ಸ್ಲಂಗಳಲ್ಲಿ ಹೆಚ್ಚುವರಿ ಕುಟುಂಬಗಳಿಗೆ ನಿವೇಶನ, ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಶಂಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಬಿಇಒ ಮಂಜುಳಾ, ಅಕ್ಷರ ದಾಸೋಹ ಇಲಾಖೆಯ ರಂಗಸ್ವಾಮಿ, ಸಿಆರ್‌ಪಿ ಮಹದೇವಕುಮಾರ್, ಕೆ. ಸೌಭಾಗ್ಯವತಿ ಸೇರಿದಂತೆ ಇನ್ನಿತರರು ಇದ್ದರು.