ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬಾತನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಬೆನ್ನಲ್ಲೇ ಶುಕ್ರವಾರ ಸಂಘಪರಿವಾರವು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಕರೆ ನೀಡಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, “ಇದು ಪೂರ್ವಯೋಜಿತ ಕೊಲೆ ಮತ್ತು ಇದರ ಹಿಂದೆ ನಿಷೇದಿತ, ಉಗ್ರವಾದಿ ಸಂಘಟನೆ ಪಿಎಫ್‌ಐನ ನೇರವಾದ ಕೈವಾಡವಿದೆ” ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
“ಈ ಕೊಲೆಯನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಎಲ್ಲಾ ಹಿಂದೂ ಸಂಘಟನೆಗಳು ಬಹಳ ಬಲವಾಗಿ ಇದನ್ನು ಖಂಡಿಸುತ್ತದೆ. ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡುತ್ತೇವೆ” ಎಂದು ತಿಳಿಸಿದ್ದಾರೆ.
ಇನ್ನು ಈ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇನ್ನು ಅಲ್ಲಲ್ಲಿ ಕಲ್ಲು ತೂರಾಟ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಆದರೆ ಪೊಲೀಸರು ಈ ಬಗ್ಗೆ ಯಾವುದೇ ದೃಢೀಕರಣ ನೀಡಿಲ್ಲ.
ಈ ಬಗ್ಗೆ ಈದಿನ ಡಾಟ್ ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಆಟೋ ಚಾಲಕರೊಬ್ಬರು, “ಯಾವುದೇ ಬಸ್‌ಗಳು ಓಡಾಡುತ್ತಿಲ್ಲ. ಹಾಗಾಗಿ ಎಲ್ಲಾ ಪ್ರಯಾಣಿಕರು ಆಟೋ ಮೇಲೆ ಅವಲಂಭಿಸಿದ್ದಾರೆ. ಅಲ್ಲಲ್ಲಿ ಕಲ್ಲು ತೂರಾಟ ನಡೆದಿದೆ. ಮಧ್ಯಾಹ್ನದವರೆಗೂ ಆಟೋ ಓಡಾಟಕ್ಕೆ ಅವಕಾಶ ಸಿಗಬಹುದು ಎನ್ನಲಾಗಿದೆ” ಎಂದು ತಿಳಿಸಿದ್ದಾರೆ.
