ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ವಿವಿಧ ಜಿಲ್ಲೆಗಳಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
“ನನ್ನ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ” ಎಂದು ಮಾಹಿತಿ ನೀಡಿದ್ದಾರೆ.
“ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿದ್ದು, ಇದು ಏಕಗವಾಕ್ಷಿ ಅನುಮೋದನಾ ಸಮಿತಿಯ ಮತ್ತೊಂದು ಸಾಧನೆ” ಎಂದು ಎಂಬಿ ಪಾಟೀಲ್ ಸಂತಸ ವ್ಯಸಕ್ತಪಡಿಸಿದ್ದಾರೆ.
ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್ ಟೂಲ್, ತಂಪು ಪಾನೀಯ, ಕಾರ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ ಅನಿಲ, ಹಾಲಿನ ಪುಡಿ ತಯಾರಿಕಾ ಘಟಕಗಳು ಇರಲಿವೆ.
“ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್(ಕೆಎಸ್‌ಡಿಎಲ್) ₹250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು, ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.
“ಸುಮಾರು ₹50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ₹2,311 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಇದರಿಂದ ಸುಮಾರು 18,972 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. 15 ಕೋಟಿ ರೂಪಾಯಿಯಿಂದ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹1,148 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 5,832 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗೆ ನೀಡಿರುವ ಅನುಮೋದನೆಯಿಂದ ₹40 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 150 ಜನರಿಗೆ ಉದ್ಯೋಗವಕಾಶ ಸಿಗಲಿದೆ” ಎಂದು ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; ಏ.3 ಕೊನೆಯ ದಿನ
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್ ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್ ಸಂಕನೂರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.