ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಮಾನ್ವಿಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್ ಹಾಗೂ ಶಾಲೆಯ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ತೆರಳುತ್ತಿದ್ದ ಬಸ್ ಮಧ್ಯೆ ಡಿಕ್ಕಿ ಹೊಡೆದು ಈ ದುರ್ಘಟನೆ ಜರುಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ. 15 ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ. ಶಾಲಾ ಬಸ್ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ.
ಇದನ್ನು ಓದಿದ್ದೀರಾ? ತುಮಕೂರು | ಗೃಹ ಸಚಿವರ ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ ಜೀವಂತ: 36 ಕೂಲಿ ಕಾರ್ಮಿಕರ ರಕ್ಷಣೆ
ಮಾನ್ವಿ ಪಟ್ಟಣದ ಲೋಯೋಲಾ ಎಂಬ ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಕೈ ಕಾಲು ಮುರಿದಿರುವುದಾಗಿ ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಾರ್ವಜನಿಕರ ಸಹಾಯದಿಂದ ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಮೃತಪಟ್ಟ ವಿದ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದರಲ್ಲದೇ, ಕುಟುಂಬಕ್ಕೆ ಸಾರಿಗೆ ಸಂಸ್ಥೆ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ ಪರಿಹಾರ ಕೊಡಿಸುವ ಭರವಸೆ ನೀಡಿದರು.
