ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸಮೀಪದ ತಿತಿಮತಿ ವ್ಯಾಪ್ತಿಯ ಕೋಣನಕಟ್ಟೆಯಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಒಳಗಾದ ಹಿರಿಯ ಐಪಿಎಸ್ ಅಧಿಕಾರಿ ಅಣ್ಣಾಳಮಾಡ ಸುನಿಲ್ ಆಚಾರ್ಯ ಅವರ ಪತ್ನಿ ಸಂಧ್ಯಾ ಆಚಾರ್ಯ (51) ಅವರು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮಾಹಿತಿಯ ಪ್ರಕಾರ, ಸಂಧ್ಯಾ ಆಚಾರ್ಯ ಅವರು ಇಂದು ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಕೋಣನಕಟ್ಟೆಯ ಕಾಫಿ ತೋಟಕ್ಕೆ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದರು.
ಘಟನೆಯ ಸಂದರ್ಭದಲ್ಲಿ ಅವರೊಂದಿಗೆ ಇದ್ದ ಇಬ್ಬರು ಕಾಫಿ ತೋಟದ ಕಾರ್ಮಿಕರು ಆನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಸಂಧ್ಯಾ ಆಚಾರ್ಯ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಗೋಣಿಕೊಪ್ಪಲಿನ ಲೋಪಾಮುದ್ರಾ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ಪ್ರಕರಣ ದಾಖಲಿಸಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ ಎಂದು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರಾದ ಎ.ಎಸ್. ಪೊನ್ನಣ್ಣ ಗಾಯಾಳುಗಳಿಗೆ ಸಾಂತ್ವಾನ ಹೇಳಿ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಭೇಟಿ ವೇಳೆ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ತಾಲ್ಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಪ್ರಮುಖರಾದ ಸೂರಜ್ ಹೊಸೂರು, ರಾಜು ಹಾಗೂ ಇನ್ನಿತರರು ಜೊತೆಗಿದ್ದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ವಿಶ್ವ ಪರಿಸರ ದಿನ: ಮರಗಳ ಸುತ್ತಲಿನ ಕಾಂಕ್ರೀಟ್ ತೆರವುಗೊಳಿಸುವ ಮೂಲಕ ವಿನೂತನ ಜಾಗೃತಿ ಕಾರ್ಯಕ್ರಮ
ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.





