ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಆಡಿದ ಮಾತುಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂಬೇಡ್ಕರ್ ಕುರಿತ ಅಮಿತ್ ಶಾ ಆಡಿದ ಅವಮಾನಕಾರಿ ಮಾತುಗಳನ್ನು ವಾಪಸ್ ಪಡೆಯಬೇಕು ಮತ್ತು ಸಂಪುಟದಿಂದ ಅಮಿತ್ ಅವರನ್ನು ವಜಾಗೊಳಿಸುವಂತೆ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳು ಆಗ್ರಹಿಸಿವೆ.
ದಲಿತ ಸಂಘಟನೆಗಳ ಒಕ್ಕೂಟ, ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಗುರುವಾರ ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಅಪಾರ ಸಂಖ್ಯೆಯ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗುತ್ತ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ʼಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲವಾದಲ್ಲಿ ದೇಶಾದ್ಯಂತ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ’ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಅನೀಲಕುಮಾರ್ ಬೆಲ್ದಾರ್ ಮಾತನಾಡಿ, ʼಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಬಾ ಸಾಹೇಬರ್ ಮೇಲೆ ನಿಜವಾದ ಗೌರವ ಭಾವ ಹೊಂದಿದ್ದರೆ, ಕೂಡಲೇ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕುʼ ಎಂದು ಆಗ್ರಹಿಸಿದರು.
ದಸಂಸ ಜಿಲ್ಲಾ ಸಂಚಾಲಕ ಬಾಬುರಾವ ಪಾಸ್ವಾನ್ ಮಾತನಾಡಿ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರನ್ನು ಅಪಮಾನಿಸಿ ಕೋಟ್ಯಾಂತರ ಅಂಬೇಡ್ಕರ್ ಅನುಯಾಯಿಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರು ದೇಶದ ಜನತೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು’ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ಸಿ ಅರವಿಂದ ಕುಮಾರ್ ಅರಳಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಜಬಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ, ಮುಖಂಡರಾದ ಶಂಕರರಾವ್ ದೊಡ್ಡಿ, ಸಂಜಯ ಜಾಗೀರದಾರ್, ಇರ್ಷಾದ್, ರಮೇಶ ಡಾಕುಳಗಿ, ಶಿವಕುಮಾರ್ ನೀಲಿಕಟ್ಟಿ, ಸಂದೀಪ ಕಾಂಟೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಭಾಲ್ಕಿ : ಕೇಂದ್ರ ಗ್ರಹ ಸಚಿವ ಅಮಿತ್ ಶಾ ಗಡಿಪಾರಿಗೆ ಆಗ್ರಹ
ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಿ, ಅವರನ್ನು ಗಡಿಪಾರು ಮಾಡಬೇಕು ಎಂದು ಪ್ರಜಾ ಪ್ರಭುತ್ವ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಗುರುವಾರ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ ಫುಲೆ ನೇತ್ರತ್ವದಲ್ಲಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಭಾಲ್ಕಿ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಮಾತನಾಡುವ ವೇಳೆ ಡಾ.ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ್ದಾರೆ. ಇದರಿಂದಾಗಿ ದೇಶದ ಬಹುಸಂಖ್ಯಾತ ಜನರ ಭಾವನೆಗೆ ಧಕ್ಕೆ ಉಂಟಾಗಿದೆ. ಬಾಬಾಸಾಹೇಬರನ್ನು ಅಪಮಾನ ಮಾಡಿರುವುದು ಖಂಡನೀಯವಾಗಿದೆ. ಅಮಿತ್ ಶಾ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್ ಅನುಯಾಯಿಗಳು ದೇಶಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಆಕಾಶ್ ಸಿಂಧೆ, ಕಲ್ಲಪ್ಪಾ ಮರೂರ್, ಅಶೋಕ್ ರತ್ನಾಕರ್, ತುಕರಾಮ ಭಾವಿದೊಡ್ಡಿ, ಜೈಭೀಮ ಭಾವಿದೊಡ್ಡೆ,ಮಿಲಿಂದ ಮುಳೆ ಇದ್ದರು.
ಹುಮನಾಬಾದ್ : ಅಮಿತ್ ಶಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರನ್ನು ಅವಹೇಳನಕಾರಿ ಆಡಿದ ಮಾತುಗಳು ಖಂಡನೀಯವಾಗಿದೆ. ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಿ, ದೇಶದ್ರೋಹದಡಿ ಪ್ರಕರಣ ದಾಖಲಿಸಬೇಕೆಂದು ಎಂದು ಆಗ್ರಹಿಸಿದರು.
ಹುಮನಾಬಾದ್ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಭೀಮ್ ಆರ್ಮಿ ಸೇರಿದಂತೆ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಗ್ರೇಡ್-2 ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷ ಅಂಬೇಡ್ಕರ್ ಅವರನ್ನು ಅವಮಾನಿಸುವುದು, ಸಂವಿಧಾನಕ್ಕೆ ಅಗೌರವ ತೋರುವುದು ನಿರಂತರವಾಗಿ ಮಾಡುತ್ತಿದ್ದಾರೆ. ಬಾಬಾ ಸಾಹೇಬರ ಕುರಿತು ಸಚಿವ ಅಮಿತ್ ಶಾ ಅವರ ಅವಹೇಳನ ಹೇಳಿಕೆ ಅಂಬೇಡ್ಕರ್ ಅನುಯಾಯಿಗಳಿಗೆ ನೋವು ತಂದಿದೆ. ಇದನ್ನು ನಾವು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂಬೇಡ್ಕರ್ ಕುರಿತ ಹೇಳಿಕೆ : ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಬಿಎಸ್‌ಪಿ ಆಗ್ರಹ
ಈ ಸಂದರ್ಭದಲ್ಲಿ ಭೀಮ್ ಆರ್ಮಿಯ ತಾಲ್ಲೂಕಾಧ್ಯಕ್ಷ ಅನೀಲ್ ದೊಡ್ಡಿ, ಎಸ್‌ಡಿಪಿಐ ಮುಖಂಡ ಶೇಖ್ ಮಕ್ಸೂದ್, ದಸಂಸ ತಾಲೂಕಾಧ್ಯಕ್ಷ ಸೋಮಶೇಖರ್ ಡಾಂಗೆ, ಮುಖರಾದ ತೈಯಾಬ್, ಮನೋಜಕುಮಾರ್ ಜಾನವೀರ್, ಎಂ.ಡಿ.ಬಾಬಾ ಪಟೇಲ್, ಯುವರಾಜ್ ಐಹೋಳ್ಳಿ, ರಾಹುಲ್ ಮೇಟಿ, ಶಶಿಕಾಂತ ಡಾಂಗೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.