ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಶೀಟರ್ ಹಲ್ಲೆ ಮಾಡಿದ್ದು, ಆತನ ಕಾಲಿಗೆ ಪೊಲೀಸರು ಗುಂಡಿ ಹಾರಿಸಿರುವ ಘಟನೆ ಶಿವಮೊಗ್ಗದ ದೊಡ್ಡದಾನವಂದಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸೈಫುಲ್ಲಾ ಖಾನ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ, ಆತ ಪೊಲೀಸರು ಮೇಲೆ ದಾಳಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಆತನ ದಾಳಿಯನ್ನು ನಿಯಂತ್ರಿಸಲು ಪಿಎಸ್‌ಐ ನವೀನ್ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ಆತ ಮತ್ತೆ ದಾಳಿ ಮಾಡಿದ್ದಾನೆ. ಹೀಗಾಗಿ, ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ಆರೋಪಿ ಮತ್ತು ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.