ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ ನಡೆಸಿತು.
ಅಂದು ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಮಣಿದು ರೈತ ವಿರೋಧಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿತ್ತು. ಅದೇ ರೀತಿ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷ ಇಲ್ಲಿವರೆಗೆ ಭರವಸೆಗಳನ್ನು ಈಡೇರಿಸಿಲ್ಲ ಎಂದು ರೈತ ಮುಖಂಡ ಎಚ್ ಆರ್ ಬಸವರಾಜಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಸಂದರ್ಭದಲ್ಲಿ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು, ಪ್ರಕಟಣೆ ಮಾಡಲಾಯಿತು. ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರದಲ್ಲಿ ರೈತ ವಿರೋಧಿ ಕಾಯ್ದೆಗಳನ್ನ ತರುವ ಸಮಿತಿಯಲ್ಲಿದ್ದ ಅಶೋಕ್ ದಳವಾಯಿ ಅವರನ್ನ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಮಾಡಲಾಯಿತು. ಕಾಂಗ್ರೆಸ್ ಸರ್ಕಾರ ಕೂಡ ಪುನಃ ಅವರನ್ನೇ ಅಧ್ಯಕ್ಷರನ್ನಾಗಿ ವಿಸ್ತರಿಸಿತು. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳ ಅಧ್ಯಯನ ನಡೆಸಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳುತ್ತಿದ್ದ ಬಿಜೆಪಿ ಸರ್ಕಾರದ ಹಳೇ ಮಂತ್ರವನ್ನೇ ಜಪಿಸುತ್ತಿದೆ ಎಂದು ಸಂಘಟನೆಯ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದದ್ದೀರಾ?: ಶಿವಮೊಗ್ಗ | ಮಾಹಿತಿ ಹಕ್ಕಿನಡಿ ಸರ್ಕಾರಿ ದಾಖಲೆಗಳನ್ನು ಪಡೆಯುವ ಬಗ್ಗೆ ಮಾಹಿತಿ ಕಾರ್ಯಾಗಾರ
ಈಗಾಗಲೇ ಮುಖ್ಯಮಂತ್ರಿಗಳಿಗೆ ತುರ್ತು ಬಹಿರಂಗ ಪತ್ರ ಕೊಡಲಾಗಿದೆ. ಆದರೆ ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ರಾಜ್ಯ ಸರ್ಕಾರದ ವಿರುದ್ಧ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಅವರೇ ನೀಡಿದ ಭರವಸೆಗಳನ್ನ ಈಡೇರಿಸಬೇಕೆಂದು ಒತ್ತಾಯಿಸಿದರು.

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.