ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ತಾಲೂಕಿನ ಅಂತರಗಂಗೆ, ಬಾರಂದೂರು, ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ರೀತಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಆಡಳಿತಕ್ಕೆ ಬಂದರೆ, ಕ್ಷೇತ್ರದ ತ್ವರಿತಗತಿಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ತಾಲೂಕಿನಲ್ಲಿ ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದೀರ. ಅದೇ ರೀತಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೂ ಅವಕಾಶ ಮಾಡಿಕೊಡಿ ಎಂದು ಕೋರಿದರು.
ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಅಯೋಧ್ಯೆಯ ರಾಮ ಮಂದಿರವನ್ನು ನಾವೆಲ್ಲರೂ ಸೇರಿ ಕಟ್ಟಿದ್ದೇವೆ. ಬಿಜೆಪಿಯವರು ಅಲ್ಲ. ಬಿಜೆಪಿಯವರು ಮೇಸ್ತ್ರಿ ಕೆಲಸ ಮಾಡಿದ್ದಾರೆ ಅಷ್ಟೇ. ಆದರೆ, ಇಲ್ಲಿ ಬಿಜೆಪಿ ನಾಯಕರು ದೇವರ ಹೆಸರಲ್ಲಿ ಮತಯಾಚನೆಗೆ ಮುಂದಾಗಿದ್ದಾರೆ. ಇದು ತಪ್ಪು ಎಂದರು.
