ಶಿವಮೊಗ್ಗ ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯವಾಗಿ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅನಗತ್ಯ ತೆರಿಗೆಯ ಸಮಸ್ಯೆಯಿಂದ ಪಾರಾಗಲು ರೈತರಿಗೆ ಇರಬಹುದಾದ ಸಾಧ್ಯತೆಗಳ ಬಗ್ಗೆ ಪ್ರಥಮ ಹಂತದ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಮಲೆನಾಡು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನೂತನ ರಸ್ತೆಗಳ ನಿರ್ಮಾಣ ಮತ್ತು ದುರಸ್ಥಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಿಯಾಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು” ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಟ್ಟಡಗಳು, ಶಿಥಿಲಗೊಂಡ ಶಾಲೆಗಳ ವಿವರಗಳನ್ನು ನೀಡುವಂತೆ ಸೂಚಿಸಿದ ಅವರು, ಈಗಾಗಲೇ ಕೈಗೆತ್ತಿಕೊಂಡಿರುವ ರಸ್ತೆ, ಸೇತುವೆ, ಕಾಲುವೆ ಮತ್ತಿತರ ಕಟ್ಟಡಗಳ ಕಾಮಗಾರಿಯನ್ನು ನಿಗದಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಗ್ರಾಮೀಣ ಜನರಿಗೆ ಉತ್ತಮ ಸಂಪರ್ಕ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 400 ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆ ಪೈಕಿ ಈಗಾಗಲೇ 150 ಕಾಲುಸಂಕ (ಕಾಲುಸೇತುವೆ)ಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಕಿ ಇರುವೆಡೆಗಳಲ್ಲಿ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಅಲ್ಲದೆ ಜಿಲ್ಲೆಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಗ್ರಾಮದ ನಿವಾಸಿಗಳಿಗೆ ಮೊಬೈಲ್ ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿಸಲಾಗುತ್ತಿರುವ ಟವರ್‌ಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇಟ್ಟುಕೊಳ್ಳುವಂತೆ ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ?:ಶಿವಮೊಗ್ಗ | ಫೆ.25ರಂದು ಸಚಿವ ಜಮೀರ್ ಅಹ್ಮದ್‌ರಿಂದ ಆಶ್ರಯ ಮನೆ ಹಂಚಿಕೆ
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು, ರಾಜ್ಯ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿ. ಸಿ. ಎಫ್. ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
