ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಸಕ್ರೆಬೈಲು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಜ್ಜವಳ್ಳಿಯ ಬಳಿ ಬೈಕಿನಲ್ಲಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ಡಿಪ್ಲೋಮಾ ವಿದ್ಯಾರ್ಥಿ ಪ್ರಥಮ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಪ್ರಥಮ್‌ನನ್ನು ಕೂಡಲೇ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಮಾರ್ಗ ಮಧ್ಯೆ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ.
ಇನ್ನು ಅಘಪಾತದ ಭೀಕರ ದೃಶ್ಯ ಸಮೀಪದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಬೈಕ್ ಸವಾರ ಏಕಾಏಕಿ ಮುಖ್ಯ ರಸ್ತೆ ಪ್ರವೇಶಿಸಿರುವುದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನ ಮುಂಭಾಗ ಸಹ ನಜ್ಜುಗುಜ್ಜಾಗಿದೆ.
ಇದನ್ನು ಓದಿದ್ದೀರಾ? ‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ
ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
