ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಶಿವಮೊಗ್ಗದ ಚರ್ಚ್ ಪಾದ್ರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಚರ್ಚ್ ಪಾದ್ರಿ ಫ್ರಾನ್ಸಿಸ್ ಫರ್ನಾಂಡಿಸ್ ಎಂಬವರು ತಮ್ಮದೇ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಂಜಾರ ಸಮುದಾಯದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಆರೋಪಿ ಪಾದ್ರಿ ವಿರುದ್ಧ ಶಿವಮೊಗ್ಗ ಕೋಟೆ ಪೊಲೀಸರು ಪೋಕ್ಸೋ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ದಾಖಲಿಸಿದ್ದಾರೆ.
ಪಾದ್ರಿಯನ್ನು ಬಂಧಿಸಿದ್ದ ಪೊಲೀಸರು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
“ಶಿವಮೊಗ್ಗದ ಚರ್ಚ್ ಪಾದ್ರಿ ಬಂಜಾರ ಸಮುದಾಯದ ಹೆಣ್ಣು ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಆತನ ವಿರುದ್ಧ ಈ ಹಿಂದೆಯೂ ಹಲವಾರು ಆರೋಪಗಳು ಕೇಳಿ ಬಂದಿವೆ. ಆದರೂ, ಕಾಲೇಜು ಆಡಳಿತ ಮಂಡಳಿ ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಬಂಜಾರ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.