ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಹೊಳೆಹೊನ್ನೂರು ಗ್ರಾಮದ ಸರ್ಕಲ್‌ನಲ್ಲಿ ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಬೈಕಿನಲ್ಲಿ ಬಂದ ದುಷ್ಕರ್ಮಿಗಳು ರವಿವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಜನರು ಗುಂಪುಗೂಡಿದ್ದು ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹೊಳೆಹೊನ್ನೂರು ಗಾಂಧಿ ಸರ್ಕಲ್ ಬಳಿ ರಸ್ತೆ ತಡೆ ನಡೆಸಿ, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಆರೋಪಿಗಳ ಬಂಧನ ಆಗುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೊಳೆಹೊನ್ನೂರಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಗುಜರಾತ್ ಮಾದರಿಗೆ ಪರ್ಯಾಯ ಮಾದರಿ ಸೃಷ್ಟಿಸುವ ಸಾಮರ್ಥ್ಯ ಕರ್ನಾಟಕಕ್ಕಿದೆ: ಯೋಗೇಂದ್ರ ಯಾದವ್
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದು, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ. ಪೊಲೀಸರ ಭರವಸೆ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ನಡೆದಿರುವ ಅತ್ಯಂತ ಹೇಯ ಕೃತ್ಯ ಇದು ಎಂದು ಕಾಂಗ್ರೆಸ್ ಮುಖಂಡ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.