ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ ಮತ್ತೆ ತೋರಿಸಿಕೊಟ್ಟಿದ್ದು ಶ್ಲಾಘನೀಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಒಟ್ಟು 44,422 ಕೋಟಿ ರೂ. ಮೀಸಲಿಟ್ಟಿದ್ದು, ಶಾಲಾ, ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್ ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ, 3ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ, ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ ಕಂಪ್ಯೂಟರ್ ಪ್ರಯೋಗಾಲಯ, ಇಂಟರ್‌ನೆಟ್ ಸೌಲಭ್ಯ ಒದಗಿಸಿರುವು ಖುಷಿ ತಂದಿದೆ.
ಅಲ್ಲದೆ, ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳ ಪರಿವರ್ತನೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೊಸ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾರಂಭ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ರಾಜ್ಯದ 74 ಆದರ್ಶ ವಿದ್ಯಾಲಯಗಳ ಉನ್ನತೀಕರಣ ಮಾಡಿರುವುದು ಶಿಕ್ಷಣ ಇಲಾಖೆಗೆ ಹೆಚ್ಚಿನ ಬಲ ನೀಡಲಿದೆ.
ಶಿವಮೊಗ್ಗ ಜಿಲ್ಲೆಗೂ ಅಭಿವೃದ್ಧಿ ಯೋಜನೆಗಳ ಬರಪೂರ ಕೊಡುಗೆ ನೀಡಿದ್ದು, ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ರೋಗ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಸಂಶೋಧನೆ ಮತ್ತು ಸಸ್ಯ ಸಂರಕ್ಷಣೆ ಚಟುವಟಿಕೆಗೆ ಉತ್ತೇಜನ ನೀಡಲು ಮುಂದಾಗಿದ್ದಾರೆ.
ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ಸ್ಥಾಪನೆ, 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವ್ಯಾಪಾರ, ವಹಿವಾಟಿನ ಮೇಲಿನ ನಿರ್ಬಂಧ ಬೆಳಗಿನ ಜಾವ 1ಗಂಟೆಯವರೆಗೆ ಸರ್ಕಾರ ವಿಸ್ತರಣೆ ಮಾಡಿದ್ದು, ಶಿವಮೊಗ್ಗ ಕೂಡ ಅದರಲ್ಲಿ ಸೇರಿದೆ.
ರಾಜ್ಯದ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಜಾರಿಗೊಳಿಸಿದ್ದು, ಅದರಲ್ಲಿ ಶಿವಮೊಗ್ಗ ಕೂಡ ಸೇರಿದೆ.
ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವಿನ್ಯತಾ ಕೇಂದ್ರ ಸ್ಥಾಪನೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಿಸಲಾಗುತ್ತಿದೆ. ಇದು ಹಿಂದುಳಿದವರು, ಶೋಷಿತರು, ಅಲ್ಪಸಂಖ್ಯಾತರು ಮಹಿಳೆಯರ ಅಭ್ಯುದಯಕ್ಕೆ ದುಡಿದ ಸಾಮಾಜಿಕ ನ್ಯಾಯಕ್ಕೆ ಶ್ರಮಿಸಿದ ಹರಿಕಾರನಿಗೆ ಸರ್ಕಾರ ನೀಡಿದ ಗೌರವ ಅಂದರೂ ತಪ್ಪಾಗಲಾರದು.
ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಹೊಸ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ, ಸೊರಬ ತಾಲೂಕು ವರದಾ ನದಿಗೆ ಅಡ್ಡಲಾಗಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ
ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುವುದು.
ಶಿವಮೊಗ್ಗ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 114 ಮೊಡ್ಯುಲರ್ ಆಪರೇಷನ್ ಥಿಯೇಟರ್ ಸ್ಥಾಪನೆ. ಮೆಗಾನ್ ಆಸ್ಪತ್ರೆಯಲ್ಲಿ ಚೈಲ್ಡ್ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ 25 ಕೋಟಿ ಅನುದಾನ. ಶಿವಮೊಗ್ಗ- ಬೊಮ್ಮನಕಟ್ಟೆ ರಸ್ತೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣಕ್ಕೆ ಅನುದಾನ (6 ಸೇತುವೆಗೆ ಒಟ್ಟು 350 ಕೋಟಿ ರೂ.)
ಕೇಂದ್ರ ಸರ್ಕಾರದ ಸಹಯೋಗದಲ್ಲಿ ವಿಜ್ಞಾನ ಕೇಂದ್ರ ಅಥವಾ ತಾರಾಲಯವನ್ನು ಹೊಸದಾಗಿ ಶಿವಮೊಗ್ಗದಲ್ಲಿ ಸ್ಥಾಪಿಸಲಾಗುತ್ತದೆ. ರಂಗಾಯಣಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಇನ್ನಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಉತ್ತೇಜನ ನೀಡಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಪರಿಷ್ಕೃತ ಪ್ರವಾಸೋದ್ಯಮ ನೀತಿ 2024–29 ಜಾರಿಗೆ ತರಲಾಗುವುದು.
ರಾಜ್ಯದ ಪ್ರಮುಖ ಜಲಾಶಯಗಲ ಹಿನ್ನೀರು ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲ ಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲಾಗುತ್ತಿದೆ. ಇದರ ಲಾಭ ಶಿವಮೊಗ್ಗ ಜಿಲ್ಲೆಗೂ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.