ರಾಜ್ಯದ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ಬೆಂಬಲ ವ್ಯಕ್ತಪಡಿಸಿದ್ದು, ಅವರ ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಕನಿಷ್ಠ ಗೌರವಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಚಳಿ ಲೆಕ್ಕಿಸದೆ ಬೀದಿಗಳಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ನೀಡಲಾಗುತ್ತಿರುವ ಗೌರವಧನ ಸಾಲದಾಗಿದ್ದು, ಮಾಸಿಕ 15 ಸಾವಿರ ರೂ. ಗೌರವಧನ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ, ಗರ್ಭಿಣಿಯರು ಮತ್ತು ಮಕ್ಕಳ ಆರೈಕೆ, ಲಸಿಕೆ, ಆರೋಗ್ಯ ಜಾಗೃತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅವರ ಸೇವೆಗೆ ತಕ್ಕ ಗೌರವ ಮತ್ತು ಆರ್ಥಿಕ ಭದ್ರತೆ ಕಲ್ಪಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ರಾಜ್ಯಾಧ್ಯಕ್ಷ ಎಂ. ರವಿಪ್ರಸಾದ್ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ನ.23ರಂದು ಮನವಿ ಸಲ್ಲಿಸಲಾಗಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರ ನ್ಯಾಯ ಒದಗಿಸುವಂತೆ ಆಗ್ರಹಿಸಲಾಗಿದೆ.




