ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆಯ ಅಂಗವಾಗಿ ವಿಶೇಷ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಮಹಾತ್ಮ ಗಾಂಧೀಜಿಯವರ ಕಲ್ಪನೆಯಂತೆ ಗ್ರಾಮ ಸ್ವರಾಜ್ಯ ಎಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ, ಅದೊಂದು ಸಮಗ್ರ ವ್ಯಕ್ತಿ ಹಾಗೂ ಸಮಾಜದ ನೈತಿಕ, ಆರ್ಥಿಕ ಮತ್ತು ಸಾಮಾಜಿಕ ಸ್ವಾವಲಂಬನೆಯಾಗಿದೆ ಎಂಬ ಉದ್ದೇಶದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಈ ವಿಶೇಷ ಸಭೆಯ ಮೂಲಕ ಶಿವಮೊಗ್ಗ ಜಿಲ್ಲಾ ‘ಆಶ್ರಿತ’ ಸಂಸ್ಥೆಯ ಸಹಯೋಗದಲ್ಲಿ, ಅರಳಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಪ್ರತಿಜ್ಞಾ ನಿರ್ಣಯವನ್ನು ಕೈಗೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶಿವಾಜಿ ಡಿಸಲೆ ಅವರು, ಬಾಲ್ಯ ವಿವಾಹದಿಂದ ಉಂಟಾಗುವ ಸಾಮಾಜಿಕ, ಶೈಕ್ಷಣಿಕ ಹಾಗೂ ಕಾನೂನುಬದ್ಧ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಬಂಧಪಟ್ಟ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಶ್ರಮದ ಫಲವಾಗಿ ಅರಳಿಹಳ್ಳಿ ಪಂಚಾಯಿತಿಯನ್ನು ಬಾಲ್ಯ ವಿವಾಹ ಮುಕ್ತ ಪಂಚಾಯಿತಿಯನ್ನಾಗಿ ರೂಪಿಸಲು ಈ ಸಂದರ್ಭದಲ್ಲಿ ನಿರ್ಣಯಿಸಲಾಯಿತು ಎಂದರು.
ತದನಂತರ ಆಶ್ರಿತ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಎಸ್. ಹನುಮಂತಪ್ಪ ಅವರು ಮಾತನಾಡಿ, “ಬಾಲ್ಯ ವಿವಾಹಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಮಕ್ಕಳಿಗೆ ಸೂಕ್ತ ಶಿಕ್ಷಣವನ್ನು ಕಲ್ಪಿಸುವುದು ಪೋಷಕರ ಪ್ರಾಥಮಿಕ ಜವಾಬ್ದಾರಿಯಾಗಿದೆ. ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಅತಿಯಾದ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯಿಂದಾಗಿ ಮಕ್ಕಳು ಗ್ರೂಮಿಂಗ್ (Grooming), ಲೈಂಗಿಕ ದೌರ್ಜನ್ಯ ಹಾಗೂ ಮಾನವ ಕಳ್ಳಸಾಗಣಿಕೆಯಂತಹ ಗಂಭೀರ ಅಪಾಯಗಳಿಗೆ ಸಿಲುಕುವ ಸಾಧ್ಯತೆ ಇರುತ್ತದೆ. ಆದ್ದರಿಂದ ಡಿಜಿಟಲ್ ವೇದಿಕೆಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳು ಅಗತ್ಯವಾಗಿವೆ” ಎಂದು ಹೇಳಿದರು.
This video cannot be played in your browser. Open the video directly

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿಯಾದ ಪ್ರತಾಪ್ ಕುಮಾರ್ ಎಸ್. ಅವರು ವಿಶೇಷ ಗ್ರಾಮ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಮತ್ತು ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮದ ಸ್ವಚ್ಛತೆ, ನೈರ್ಮಲ್ಯ ಹಾಗೂ ಮಕ್ಕಳ ಸುರಕ್ಷತೆಗೆ ಗ್ರಾಮಸ್ಥರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದ ಅವರು, ಆಶ್ರಿತ ಸಂಸ್ಥೆಯ ಜನಪರ ಹಾಗೂ ಸಾಮಾಜಿಕ ಕೆಲಸಗಳನ್ನು ಮುಕ್ತಕಂಠದಿಂದ ಪ್ರಶಂಸಿಸಿದರು.
ಇದೇ ಸಂದರ್ಭದಲ್ಲಿ ಆಶ್ರಿತ ಸಂಸ್ಥೆಯ ತಾಲ್ಲೂಕು ಸಮುದಾಯ ಸಾಮಾಜಿಕ ಕಾರ್ಯಕರ್ತರಾದ ಸಂಗಮೇಶ ಅವರು ಎಲ್ಲರಿಗೂ ‘ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀ ಸತೀಶ ಗೌಡ, ಪಂಚಾಯಿತಿ ಸಿಬ್ಬಂದಿವರ್ಗ, ಗ್ರಾಮಸ್ಥರು ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳ ಎಂಬಿಕೆ (MBK) ಒಕ್ಕೂಟದ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.






