ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಜನ್ಮದಿನದ ಅಂಗವಾಗಿ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ರಾಷ್ಟ್ರೀಯ ಪ್ರಾಣಿ ಆದ ಎರಡು ಹುಲಿಗಳನ್ನು ದತ್ತು ಪಡೆಯುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನ ಆಚರಿಸಲಾಯಿತು.
ಯುವ ನಾಯಕರ ಪರಿಸರ ಕಾಳಜಿಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಚೇತನ್ ಗೌಡ, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಿ. ಮಧುಸೂದನ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಗರಾಧ್ಯಕ್ಷರಾದ ಚರಣ್ ಶೆಟ್ಟಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಎನ್.ಎಸ್.ಯು.ಐ ಜೊತೆಗೂಡಿ ಸಿಂಹಧಾಮದ ‘ಪೂರ್ಣಿಮಾ’ ಹಾಗೂ ‘ವಿಕ್ರಂ’ ಎಂಬ ಹೆಸರಿನ ಎರಡು ಹುಲಿಗಳನ್ನು ದತ್ತು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, “ಆಡಂಬರದ ಆಚರಣೆಗಳಿಗೆ ಬ್ರೇಕ್ ಹಾಕಿ, ವನ್ಯಜೀವಿ ಸಂರಕ್ಷಣೆಗೆ ಕೊಡುಗೆ ನೀಡುವುದು ನಮ್ಮ ನಾಯಕರಿಗೆ ನೀಡುವ ನಿಜವಾದ ಗೌರವ. ಬಿ.ವಿ. ಶ್ರೀನಿವಾಸ್ ಅವರ ಜನಪರ ನಿಲುವಿಗೆ ಪೂರಕವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.
ವನ್ಯಜೀವಿಗಳ ರಕ್ಷಣೆ ಇಂದಿನ ಅಗತ್ಯವಾಗಿದ್ದು, ಇಂತಹ ಸಾಮಾಜಿಕ ಕಾಳಜಿಯ ಕೆಲಸಗಳು ಸಮಾಜಕ್ಕೆ ಮಾದರಿಯಾಗಲಿವೆ ಎಂದು ಅವರು ಆಶಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಸಂಘಟನೆಯ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಪರಿಸರ ಸಂರಕ್ಷಣೆಯ ಸಂಕಲ್ಪದೊಂದಿಗೆ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು..





