ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಳೆಹೊನ್ನೂರು ತಾಲೂಕಿನ ಹನುಮಂತಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ.
ಹನುಮಂತಾಪುರದ ಅಡಿಕೆ ತೋಟದಲ್ಲಿ ಮೃತದೇಹವೊಂದು ಸುಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಮೃತದೇಹದ ಸುತ್ತ ಇನ್ನೂ ಬೆಂಕಿ ಉರಿಯುತ್ತಿತ್ತು ಎನ್ನಲಾಗಿದೆ. ಬೆಂಕಿಯ ತೀವ್ರತೆಗೆ ಮೃತದೇಹವು ಗುರುತು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ ಎಂದು ವರದಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಹೊಳೆಹೊನ್ನೂರು ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯಕ್ಕೆ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.




