ಮುಖ್ಯಮಂತ್ರಿಗಳಿಗೆ ಮನುಷ್ಯತ್ವ ಇದ್ದರೆ, ಸಿಎಂ ಸ್ಥಾನಕ್ಕೆ ಗೌರವ ತರುವ ಕಿಂಚಿತ್ತು ಕಾಳಜಿ ಇದ್ದರೆ ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರವನ್ನು ತಕ್ಷಣ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆ ಪಡೆದುಕೊಳ್ಳಬೇಕು. ಅನಾಥ ಮಕ್ಕಳನ್ನು ರಾಜ್ಯ ಸರಕಾರ ದತ್ತು ತೆಗೆದುಕೊಳ್ಳಬೇಕು. ಆಗ ಮಾತ್ರ ಭಗವಂತ ನಿಮ್ಮನ್ನು ಕ್ಷಮಿಸಲು ಸಾಧ್ಯ” ಎಂದು ತಿಳಿಸಿದರು.
“ಕಾಂಗ್ರೆಸ್ಸಿನ ದುಷ್ಟ ಸರಕಾರ ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಈ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ. ಬಾಣಂತಿಯರು, ನವಜಾತ ಶಿಶುಗಳ ಸಾವಿನ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಮೋರ್ಚಾದಿಂದ ರಾಜ್ಯಾದ್ಯಂತ ಹೋರಾಟ ನಡೆದಿದೆ. ತಡ ಮಾಡದೇ 25 ಲಕ್ಷ ಪರಿಹಾರ ಘೋಷಿಸಿ; ಮಕ್ಕಳ ಜೀವನೋಪಾಯಕ್ಕೆ ವ್ಯವಸ್ಥೆಯನ್ನೂ ರಾಜ್ಯ ಸರಕಾರವೇ ಮಾಡಬೇಕು” ಎಂದು ಒತ್ತಾಯಿಸಿದರು.
“ಈ ಸಾವುಗಳ ಸಂಬಂಧ ಮಾಹಿತಿಯನ್ನು ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಮೂಲಕ ತಿಳಿಸಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದ್ದೇವೆ. ಆ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ಬಿಜೆಪಿ ಮಾಡಲಿದೆ” ಎಂದರು.
ಬಜೆಟ್ ಅಧಿವೇಶನದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ
“ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಲ್ಲಿಯೆ ಚರ್ಚೆಯಾಗುತ್ತಿದೆ. ಇದೇ ಕಾರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಆಯೋಜಿಸುವ ಮೂಲಕ ಸಿದ್ದರಾಮಯ್ಯ ರಾಜಕೀಯ ದಾಳ ಉರುಳಿಸಿದ್ದಾರೆ” ಎಂದು ಬಿ.ವೈ.ವಿಜಯೇಂದ್ರ ಪ್ರತಿಭಟನೆ ನಂತರ ಸುದ್ದಿಗಾರರಿಗೆ ಹೇಳಿದರು.
“ಸಿಎಂ ಸ್ಥಾನ ತ್ಯಜಿಸಲು ಸಿದ್ದರಾಮಯ್ಯ ಸಿದ್ಧರಿಲ್ಲ. ಅದೇ ರೀತಿ ಕಾಂಗ್ರೆಸ್‌ನಲ್ಲಿರುವ ವಿರೋಧಿ ಬಣ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಲ್ಲಿ ಉಳಿಸಲು ಸಿದ್ಧರಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದ ವರ್ಸಸ್ ಸಿದ್ದ ಸ್ಥಿತಿ” ಇದೆ ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ವಿವಿಧ ಪ್ರಕೋಷ್ಠಕಗಳ ರಾಜ್ಯ ಸಂಚಾಲಕ ದತ್ತಾತ್ರಿ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗಾಯತ್ರಿ ದೇವಿ, ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾದ ಹೇಮತ್ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.