ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯ ಕುರಿತು ಬಿಜೆಪಿ ಮುಖಂಡರು ನೀಡಿರುವ ದೂರಿನ ಹಿನ್ನೆಲೆಯಲ್ಲಿ, ನಿಯಮಾನುಸಾರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.
ಈ ಕುರಿತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಸಿ. ಯೋಗೀಶ್ ಅವರು ಜಿಲ್ಲೆಯ ಶಾಸಕರು, ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.ಮನವಿಯಲ್ಲಿ, ಸತೀಶ್ ಅವರು ಸೆಪ್ಟೆಂಬರ್ 16, 2026ರಂದು ತಾಲ್ಲೂಕು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದು, ಭಾಗ ಸಂಖ್ಯೆ 186ರಲ್ಲಿರುವ 81 ಮಂದಿ ಮತದಾರರು ಬೇರೆಡೆ ವಾಸವಾಗಿದ್ದಾರೆ ಎಂಬ ರೀತಿಯಲ್ಲಿ ಪ್ರಸ್ತಾಪಿಸಿರುವುದಾಗಿ ತಿಳಿಸಲಾಗಿದೆ.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ದೂರು ಬಂದಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳು (BLO) ಮತದಾರರ ವಿವರಗಳನ್ನು ಪರಿಶೀಲಿಸಿ, ಅಗತ್ಯವಿರುವ ದಾಖಲೆಗಳು ಹಾಗೂ ಗಣತಿ ನಮೂನೆಗಳ ಆಧಾರದ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ತಿಳಿಸಿದೆ.ಅಲ್ಲದೆ, ಮತದಾರರ ಪಟ್ಟಿಯ ಪರಿಶೀಲನೆಯ ಹೆಸರಿನಲ್ಲಿ ಜನರಲ್ಲಿ ಗೊಂದಲ ಅಥವಾ ಆತಂಕ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸಬೇಕು. ದೂರುದಲ್ಲಿರುವ ಅಂಶಗಳನ್ನು ವಾಸ್ತವಾಂಶಗಳ ಆಧಾರದ ಮೇಲೆ ಪರಿಶೀಲಿಸಿ, ಯಾವುದೇ ಅರ್ಹ ಮತದಾರರ ಹೆಸರನ್ನು ಅನ್ಯಾಯವಾಗಿ ತೆಗೆದುಹಾಕದಂತೆ ಹಾಗೂ ಅನರ್ಹ ಹೆಸರುಗಳಿದ್ದರೆ ಕಾನೂನುಬದ್ಧ ಪ್ರಕ್ರಿಯೆಯಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಸತ್ಯಾಸತ್ಯತೆ ದೃಢಪಡಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದು ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಸಿ. ಯೋಗೀಶ್ ಜಿಲ್ಲಾಧಿಕಾರಿಗಳಿಗೆ ಮನವಿಯಲ್ಲಿ ತಿಳಿಸಿದ್ದಾರೆ .





