ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಚರ್ಚಿಸಿ ಸಮುದಾಯದ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ಸಿಗುವಂತಾಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಝಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು.
ಬೆಂಗಳೂರಿನ ವಸಂತ ನಗರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಝಾದ್ ಭವನದಲ್ಲಿ ಇಂದು ಸಚಿವರು ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು. ಆ ಬಳಿಕ ತಮ್ಮನ್ನು ಭೇಟಿಯಾದ ಕ್ರೈಸ್ತ, ಸಿಖ್, ಬೌದ್ಧ ಹಾಗೂ ಜೈನ, ಮುಸ್ಲಿಂ ಸಮುದಾಯದ ಮುಖಂಡರ ಜತೆ ಸಭೆ ನಡೆಸಿದರು.

ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಿರುವಂತೆ ಜೈನ, ಬೌದ್ಧ ಹಾಗೂ ಸಿಖ್ ಸಮುದಾಯದ ಅಭಿವೃದ್ಧಿಗೆ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದರು. ಜತೆಗೆ ಬಜೆಟ್ ನಲ್ಲಿ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.
ಇದನ್ನು ಓದಿದ್ದೀರಾ? ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿ ಕೆ ಶಿವಕುಮಾರ್
ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಝಮೀರ್ ಅಹಮದ್ ಖಾನ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಎಲ್ಲ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜೀಲಾನಿ ಹೆಚ್ ಮೊಕಾಶಿ ಸೇರಿದಂತೆ ಹಲವು ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


