ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅಸಭ್ಯ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಪ್ರಸನ್ನ ಶೆಟ್ಟಿ, ಕ್ಷೇತ್ರದ ಅಭಿವೃದ್ಧಿಗಾಗಿ ಜನಸಾಮಾನ್ಯರ ನಡುವೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕರ ವಿರುದ್ಧ ಬೇನಾಮಿ ಖಾತೆಗಳ ಮೂಲಕ ವೈಯಕ್ತಿಕ ನಿಂದನೆ, ಅವಹೇಳನ ಹಾಗೂ ಅಪಪ್ರಚಾರ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ
ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವವರನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯನ್ನು ಅವರು ಆಗ್ರಹಿಸಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯ ಅವಹೇಳನಕಾರಿ ಭಾಷೆ ಹಾಗೂ ನಿಂದನೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು,” ಎಂದು ಪ್ರಸನ್ನ ಶೆಟ್ಟಿ ತಿಳಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳ ಕುರಿತು ಟೀಕೆ-ವಿಮರ್ಶೆ ಮಾಡುವಾಗ ನಾಗರಿಕತೆ ಹಾಗೂ ಸಂಯಮ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.




