ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಾಚಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ಒಂದು ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. 50 ಮೀಟರ್ ಫ್ರೀ ಸ್ಟೈಲ್ ಹಾಗೂ 100 ಮೀಟರ್ ಫ್ರೀ ಸ್ಟೈಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನೂ ಗೆದ್ದಿದ್ದಾರೆ.
ಇದನ್ನೂ ಓದಿ: ಉತ್ತರ ಕನ್ನಡ | ಪದವೀಧರ ಮತದಾರರ ಹೆಸರು ನೊಂದಾವಣಿ ಪ್ರಕ್ರಿಯೆ ಆರಂಭ
ಈ ಮೂಲಕ ಒಟ್ಟು ಎರಡು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗಳಿಸಿದ ಪ್ರಾಚಿ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಾಚಿಯ ಈ ಸಾಧನೆಗೆ ಶಿರಸಿಯ ಮಾರಿಕಾಂಬಾ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದಲ್ಲಿಯೂ ಅವರು ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.