ಶಿರಸಿ: ರಾಜ್ಯದಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಸಾಗುವಳಿ ಪ್ರದೇಶ ಹೊಂದಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂಬ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸಮರ್ಥ ವಾದ ಮಂಡಿಸಲು ಸಿದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರತಿನಿಧಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ, ಈ ವಿಷಯದಲ್ಲಿ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಮೂರು ಎಕರೆ ಒಳಗಿನ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸರ್ಕಾರದ ಆದೇಶಕ್ಕೆ ಸರ್ಕಾರ ಬದ್ಧವಾಗಿದ್ದು, ಹೈಕೋರ್ಟ್‌ನಲ್ಲಿ ದಾಖಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಅಡ್ವೋಕೇಟ್ ಜನರಲ್ ಹಾಗೂ ಸರ್ಕಾರದ ವಕೀಲರ ತಂಡದೊಂದಿಗೆ ಚರ್ಚಿಸಿ ಬಲವಾದ ವಾದ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜಿ.ಪಂ ಸಿಇಒ ಡಾ. ದಿಲೀಷ್ ಶಸಿ ಅನಿರೀಕ್ಷಿತ ಭೇಟಿ: ನರೇಗಾ ಕೂಲಿಕಾರರ ಸಮಸ್ಯೆ ಆಲಿಕೆ
ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ಪ್ರಕಾರ, ಸರ್ಕಾರದ ಆದೇಶವನ್ನು ರದ್ದುಪಡಿಸಿದರೆ ನೈಜ ಅರಣ್ಯವಾಸಿಗಳಿಗೆ ಸಂಕಷ್ಟ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ವೇಳೆ ವೇದಿಕೆ ಪಕ್ಷಗಾರರಾಗಿ ಸೇರ್ಪಡೆಯಾಗಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ಅರ್ಜಿಯಲ್ಲಿ, ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ರಾಜ್ಯ ಸರ್ಕಾರ ಅರಣ್ಯ ಭೂಮಿ ಸಂಬಂಧಿತ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲಾಗುವುದಿಲ್ಲ ಎಂಬ ಅಂಶವನ್ನು ಪ್ರಶ್ನಿಸಲಾಗಿದ್ದು, ಸರ್ಕಾರದ ಆದೇಶ ಕಾನೂನುಬಾಹಿರ ಎಂದು ವಾದಿಸಲಾಗಿದೆ ಎಂದು ತಿಳಿದುಬಂದಿದೆ.




