ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಗೆ ಸೇರಿದ ಸುಮಾರು 389.07 ಎಕರೆ ಜಮೀನನ್ನು ಅಧಿಕಾರಿಗಳು ಮರಳಿ ತಮ್ಮ ವಶಕ್ಕೆ ಪಡೆದಿದ್ದಾರೆ.
ಗೋಳಿಕಟ್ಟಾ ಪ್ರದೇಶದಲ್ಲಿ ಈ ಹಿಂದೆ ಕಾಮಧೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘಕ್ಕೆ ಅರಣ್ಯ ಇಲಾಖೆಯ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ನೀಡಲಾಗಿತ್ತು. ಗುತ್ತಿಗೆ ಅವಧಿ ಮುಗಿದ ಬಳಿಕವೂ ಜಾಗವನ್ನು ಇಲಾಖೆಗೆ ಹಸ್ತಾಂತರಿಸದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿತ್ತು.
ಈ ಕುರಿತು ಧಾರವಾಡ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದ್ದು, ಇತ್ತೀಚೆಗೆ ಅರಣ್ಯ ಇಲಾಖೆಯ ಪರವಾಗಿ ತೀರ್ಪು ಬಂದಿದೆ. ಇದೇ ಜಾಗದ ಕೆಲ ಭಾಗಗಳಲ್ಲಿ ಹಲವು ಮಂದಿ ಅಕ್ರಮವಾಗಿ ವಾಸವಿದ್ದು, ಒತ್ತುವರಿ ಮಾಡಿಕೊಂಡಿದ್ದರು ಎನ್ನಲಾಗಿದೆ. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಸ್ಥಳಕ್ಕೆ ತೆರಳಿ ಜೆಸಿಬಿ ಹಾಗೂ ಟ್ರ್ಯಾಕ್ಟರ್‌ಗಳ ನೆರವಿನಿಂದ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡರು.
ಈ ಸುದ್ದಿ ಓದಿದ್ದೀರಾ? ಶಿರಸಿ | ಕಸ್ತೂರಿ ರಂಗನ್ ವರದಿ ಜಾರಿಗೆ ತರುವುದಿಲ್ಲ: ಅರಣ್ಯ ಸಚಿವರ ಭರವಸೆ
ಕಾರ್ಯಾಚರಣೆಗೆ ಸ್ಥಳೀಯ ಮಹಿಳೆಯರು ಹಾಗೂ ವೃದ್ಧರು ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಕೆಲ ಒತ್ತುವರಿದಾರರು ರಸ್ತೆ ತಡೆ ನಡೆಸಿದರು.
ಇದರಿಂದ ಗೋಳಿಕಟ್ಟಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡು, ಪ್ರತಿಭಟನಾಕಾರರನ್ನು ಮನವೊಲಿಸುವ ಪ್ರಯತ್ನ ನಡೆಸಿದರು. ಅರಣ್ಯ ಇಲಾಖೆಯ ಜಾಗವನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.




