ಶಿರಸಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷವು ಶಾಸಕ ಭೀಮಣ್ಣ ಟಿ. ನಾಯ್ಕ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಪಕ್ಷವು ನನ್ನ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿಯನ್ನು ನೀಡಿದೆ. ಜಿಲ್ಲೆಯ ಎಲ್ಲ ನಾಯಕರು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗುವುದು. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸುವ ಮಹತ್ವದ ಕೆಲಸವಾಗಿದೆ
ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ವ್ಯಕ್ತಿ ಹೊರಗುಳಿಯದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಹೇಳಿದರು. 18 ವರ್ಷ ಪೂರೈಸಿದ ಹೊಸ ಮತದಾರರನ್ನು ಗುರುತಿಸಿ ಬೂತ್ ಮಟ್ಟದಲ್ಲೇ ಅವರ ಹೆಸರುಗಳನ್ನು ಪಟ್ಟಿಗೆ ಸೇರ್ಪಡೆಗೊಳಿಸುವ ಕೆಲಸಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ
ಮತದಾರರ ಪಟ್ಟಿಯಲ್ಲಿರುವ ತಪ್ಪು ಮಾಹಿತಿಗಳನ್ನು ಸರಿಪಡಿಸುವುದು, ಮೃತಪಟ್ಟಿರುವ ಹಾಗೂ ಶಾಶ್ವತವಾಗಿ ಬೇರೆಡೆಗೆ ವಲಸೆ ಹೋಗಿರುವ ಮತದಾರರ ಹೆಸರುಗಳನ್ನು ನಿಯಮಾನುಸಾರ ತೆಗೆದುಹಾಕಲು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಪ್ರತಿ ಬೂತ್‌ನಲ್ಲೂ ಪಕ್ಷದ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ) ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಘಟನಾ ದೃಷ್ಟಿಯಿಂದಲೂ ಗಂಭೀರವಾಗಿ ಪರಿಗಣಿಸಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ತಲುಪಿಸುವುದರ ಜೊತೆಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ವಹಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರು, ವಿವಿಧ ತಾಲೂಕುಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.ವಿವಿಧ ಘಟಕಗಳ ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





