ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣದ ಮರುತನಿಖೆಗಾಗಿ ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ. ಸಿಬಿಐ ಕೋರ್ಟ್‌ನ ತೀರ್ಪು ಓದಿದ ನಂತರ, ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ ನಡೆಸಿ, ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು” ಎಂದರು.