ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರೀಯಾ ತನಿಖಾ ದಳ (ಸಿಬಿಐ) ಅಥವಾ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಮರು ತನಿಖೆ ನಡೆಸಬೇಕೆಂದು ಸರ್ಕಾರಕ್ಕೆ ಆದೇಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣವನ್ನು ಹೊಸದಾಗಿ ಮರು ತನಿಖೆ ನಡೆಸಬೇಕೆಂದು ಕೋರಿ ಬೆಂಗಳೂರಿನ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದವು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
“2012ರಲ್ಲಿ ವಿದ್ಯಾರ್ಥಿನಿ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ ಎಂಬ ಕಾರಣದಿಂದ ಆತನನ್ನು ಖುಲಾಸೆಗೊಳಿಸಲಾಗಿದೆ. ಅಲ್ಲದೆ, ಪ್ರಕರಣ ನಡದಿರುವುದು ನಿಜವೆಂದು ಸಿಬಿಐ ವಿಶೇಷ ನ್ಯಾಯಾಲಯ ಹೇಳಿದೆ. ಕೃತ್ಯ ನಡೆದಿದ್ದ ಮೇಲೆ, ಅಪರಾಧಿಯೂ ಇರಲೇಬೇಕು. ನೈಜ ಅಪರಾಧಿಗಳು ಪ್ರಕರಣದಿಂದ ತಪ್ಪಿಸಿಕೊಂಡಿದ್ದಾರೆ. ಅವರನ್ನು ಗುರುತಿಸಿ, ವಿಚಾರಣೆ ನಡೆಸಿ, ಶಿಕ್ಷೆಗೊಳಪಡಿಸಬೇಕು. ಪ್ರಕರಣದಲ್ಲಿ ತನಿಖಾಧಿಕಾರಿಗಳು ಮತ್ತು ವೈದ್ಯರಿಂದಲೂ ದೋಷಗಳಾಗಿವೆ. ಹಾಗಾಗಿ, ಪ್ರಕರಣವನ್ನು ಮರು ತನಿಖೆ ನಡೆಸಲು ಸರ್ಕಾರಕ್ಕೆ ಆದೇಶಿಸಬೇಕು” ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, “ಸಭೆ-ಸಮಾರಂಭ, ಧರಣಿ ಹಾಗೂ ಸಾರ್ವಜನಿಕರ ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ. ಅರ್ಜಿದಾರರ ಉದ್ದೇಶ ಒಳ್ಳೆಯದೇ ಆಗಿದ್ದರೂ ಪಿಐಎಲ್‌ಅನ್ನು ಕಾನೂನಿನ ಮಿತಿ ಅರಿತು ವ್ಯವಹರಿಸಬೇಕಾಗುತ್ತದೆ. ಅದಕ್ಕಾಗಿ, ಅರ್ಜಿದಾರರು ತಮ್ಮ ಅರ್ಜಿ ಹಿಂಪಡೆದು ಕಾನೂನಿನಡಿ ಲಭ್ಯವಿರುವ ಪರ್ಯಾಯ ವಿಧಾನಗಳ ಮೂಲಕ ಪರಿಹಾರ ಪಡೆದುಕೊಳ್ಳಬಹುದು” ಎಂದು ಹೇಳಿದೆ.
ಅಲ್ಲದೆ, “ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶದ ವಿರುದ್ಧ ಸರ್ಕಾರ, ಮೂಲ ದೂರುದಾರರು ಅಥವಾ ಸಂತ್ರಸ್ತ ಕುಟುಂಬವು ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿದೆ. ಮೇಲ್ಮನವಿಯಲ್ಲಿ ತನಿಖಾ ಲೋಪಗಳನ್ನು ಕೂಡ ಪರಿಗಣಿಸಬಹುದಾಗಿದೆ. ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ಕುಟುಂಬಕ್ಕೆ ಅರ್ಜಿದಾರರು ನೆರವು ನೀಡಬಹುದು” ಎಂದು ಹೇಳಿದೆ. ಅರ್ಜಿಯನ್ನು ವಜಾಗೊಳಿಸಿದೆ.
ತೀರ್ಪಿನಲ್ಲಿ “ಅರ್ಜಿಯನ್ನು ವಜಾಗೊಳಿಸಿದೆ” ಎಂದಿದೆಯಾ? ಸಾಮಾನ್ಯವಾಗಿ “ಇತ್ಯರ್ಥಗೊಳಿಸಲಾಗಿದೆ” (disposed off) ಎಂದಿರುತ್ತದೆ.
‘ವಜಾಗೊಳಿಸುವುದು’ ಮತ್ತು dispose ಮಾಡುವುದು ಎರಡಕ್ಕೂ ಕಾನೂನಿನ ಪರಿಭಾಷೆಯಲ್ಲಿ ಪ್ರತ್ಯೇಕ ಅರ್ಥ ಇರುವಂತಿದೆ.