ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಸಂತೋಷ ರಾವ್ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವವರು ಯಾರು? ಈ ಸತ್ಯವನ್ನು ಶೋಧನೆ ನಡೆಸಲು ಮರುತನಿಖೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕಾಗಿ ವಿಶೇಷ ತನಿಖೆ ತಂಡವನ್ನು (SIT)ರಚಿಸಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ ಬೆಂಗಳೂರಿನ ʼನೈಜ ಹೋರಾಟಗಾರರ ವೇದಿಕೆʼ ಮನವಿ ಮಾಡಿದೆ.
ಮಂಗಳವಾರ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮಾಹಿತಿ ಹಕ್ಕು ಕಾರ್ಯಕರ್ತ, ಹೋರಾಟಗಾರ ಎಚ್ ಎಂ ವೆಂಕಟೇಶ್, “ನಮ್ಮ ಮನವಿಗೆ ಸ್ಪಂದಿಸಿದ ಗೃಹ ಸಚಿವರು ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ಈ ದಿನಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ ಸೌಜನ್ಯ ಪ್ರಕರಣ | ʼಗೋಲ್ಡನ್ ಅವರ್ʼ ನಲ್ಲಿ ಸಂಪೂರ್ಣ ಸಾಕ್ಷ್ಯ ನಾಶ ಮಾಡಲಾಗಿದೆ; ಸಿಬಿಐ ವರದಿ
ಸ್ಥಳೀಯ ಠಾಣಾ ಪೊಲೀಸರು, ಸಿಒಡಿ ತಂಡದವರು ಪ್ರಕರಣದ ತನಿಖೆ ನಡೆಸುವಲ್ಲಿ ಪ್ರಾಥಮಿಕ ಹಂತದಲ್ಲಿಯೇ ಕರ್ತವ್ಯಲೋಪ ಎಸಗಿದ್ದಾರೆ. ನಂತರ ತನಿಖೆ ನಡೆಸಿದ ಸಿಬಿಐ ಕೂಡಾ ಸಮಗ್ರವಾಗಿ ತನಿಖೆ ನಡೆಸಿಲ್ಲ. ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕರ್ನಾಟಕ ಪೊಲೀಸರು ಹಿಂದೆ ಹಲವು ಪ್ರಕರಣಗಳಲ್ಲಿ ಚಾಣಾಕ್ಷತನದಿಂದ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ ಉದಾಹರಣೆ ಇದೆ. ಈ ಪ್ರಕರಣದಲ್ಲಿ ಕಾಣದ ಕೈಗಳು ಕೆಲಸ ಮಾಡಿವೆ. ಪ್ರಾಥಮಿಕ ಹಂತದಲ್ಲಿಯೇ ಪ್ರಕರಣವನ್ನು ಭೇದಿಸುವಲ್ಲಿ ವಿಫಲರಾಗಿದ್ದಾರೆ. ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಅನುಮಾನವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಲ್ಲಿಕಾರ್ಜುನ್ ಮತ್ತು ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.