ಬರ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕೆಪಿಆರ್‌ಎಸ್ ತಾಲೂಕು ಸಮಿತಿ ವತಿಯಿಂದ ಶ್ರೀನಿವಾಸಪುರ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬರ ಪರಿಸ್ಥಿತಿಯಿಂದ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟದಲ್ಲಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಮಾತನಾಡಿ, ರಾಗಿ, ಹುರುಳಿ, ಟೊಮ್ಯಾಟೊ, ತರಕಾರಿ ಹಾಗೂ ಮಾವು ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಪಾವತಿಸಿರುವ ಬೆಳೆ ವಿಮೆ ಪರಿಹಾರವನ್ನು ಶೀಘ್ರವಾಗಿ ವಿತರಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರು ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ಪಶುವೈದ್ಯಕೀಯ ಸೇವೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಇದೇ ವೇಳೆ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಬೇಕು, ಶ್ರೀನಿವಾಸಪುರದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳೀಯ ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಸುಧೀಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.




