ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ಪಟ್ಟಣದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಇಲಾಖೆಯನ್ನು ಆದ್ಯತೆಯನ್ನಾಗಿಸಿಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಆಟದ ಮೈದಾನ, ವಿದ್ಯುತ್ ಪೂರೈಕೆ, ಕಂಪ್ಯೂಟರ್ ಹೀಗೆ ಎಲ್ಲಾ ರೀತಿಯ ಅವಶ್ಯಕತೆಗಳನ್ನು ಪೂರೈಸುತ್ತಾ ಬರುತ್ತಿದ್ದೇನೆ. ಆದರೆ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಶಿಕ್ಷಣ ಇಲಾಖೆಯ ಕಾರ್ಯವೈಖರಿ ವಿರುದ್ಧ ಕಿಡಿಕಾರಿದರು.
‘ಕ್ಷೇತ್ರದಲ್ಲಿ ಗ್ರಾಮ ಸಂಚಾರ ಕೈಗೊಂಡಿದ್ದು, ಪ್ರತಿ ಶಾಲೆಗೆ ಭೇಟಿ ನೀಡುತ್ತಿದ್ದೇನೆ. ಕೆಲವು ಶಾಲೆಗಳಲ್ಲಿ ಮಕ್ಕಳು ಕಡಿಮೆಯಿದ್ದು, ಹೆಚ್ಚಿನ ಶಿಕ್ಷಕರಿದ್ದಾರೆ. ಕೆಲವು ಶಾಲೆಗಳಲ್ಲಿ ಮಕ್ಕಳು ಹೆಚ್ಚಿದ್ದು ಶಿಕ್ಷಕರೇ ಇಲ್ಲ. ನಾನು ಶಿಕ್ಷಕರಿಗೆ ತುಂಬಾ ಗೌರವದಿಂದ ಕಾಣುತ್ತೇನೆ. ಆದರೆ ಶಿಕ್ಷಕರು ಅವರು ಮಾತ್ರ ಸರಿಯಾಗಿ ಕೆಲಸ ಮಾಡದೆ ನಿರಾಶೆಯುಂಟು ಮಾಡುತ್ತಿದ್ದಾರೆ’ ಎಂದರು.

‘ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಾಲೆಗಳಿಗೆ ಭೇಟಿ ನೀಡಿ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಕ್ಷೇತ್ರದಲ್ಲಿ ಶಿಕ್ಷಣ ಸುಧಾರಣೆಗೆ ಅಗತ್ಯ ಸೌಕರ್ಯ ಒದಗಿಸಲಾಗುವುದು. ಶಿಕ್ಷಕರು ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ನೋಡಿಕೊಂಡು ಬೋಧಿಸಬೇಕು’ ಎಂದು ತಿಳಿಸಿದರು.
ಎಲ್ಲ ಮಕ್ಕಳಲ್ಲೂ ಒಂದಿಲ್ಲೊಂದು ರೀತಿಯ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ರೂಢಿಸಿಕೊಳ್ಳಬೇಕು. ಉತ್ತಮ ಅಧ್ಯಯನದಿಂದ ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ
ಸಮಾರಂಭದಲ್ಲಿ ಪಟ್ಟಣ ಪಂಚಾಯತ ಸದಸ್ಯ ದಯಾನಂದ ಘೋಳೆ, ಸಂತೋಷ ಪೋಕಲವಾರ್, ಸಂಜು ವಡೆಯರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾರಾಣಿ, ಮುಖಂಡರಾದ ಶಿವರಾಜ ಅಲಮಾಜೆ, ಕೆರಬಾ ಪವಾರ, ಸೇರಿದಂತೆ ಮತ್ತಿತರರು ಇದ್ದರು. ನಂತರ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ನಿಮಗೆ ಕನ್ನಡ ಓದಲು ಬರೆಯಲು ಬರುತ್ತಾ ಯಥಾ ರಾಜ ತಥಾ ಪ್ರಜಾ