ಕೊಡಗು ಜಿಲ್ಲೆಯಲ್ಲಿ ಅಂತರ್ಜಲ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಮರ್ಪಕ ಬಳಕೆಗಾಗಿ ಕೆರೆ, ಕಟ್ಟೆ ಹಾಗೂ ನದಿ ಮೂಲಗಳನ್ನು ಉಳಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್ ಸೂಚಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಂತರ್ಜಲ ಅಭಿವೃದ್ಧಿ ಮತ್ತು ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ. ಅಂತರ್ಜಲ ನಿರ್ದೇಶನಾಲಯ ಅಥವಾ ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರವೇ ಕಾರ್ಯನಿರ್ವಹಿಸಲಾಗುತ್ತಿದೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೆರೆ, ಕಟ್ಟೆ ಮತ್ತು ನದಿ ಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು ಹಾಗೂ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಅಂತರ್ಜಲ ಇಲಾಖೆಯ ಹಿರಿಯ ಭೂ ವಿಜ್ಞಾನಿ ಎಸ್. ಸುಧಾ ಮಾಹಿತಿ ನೀಡಿ, ಗಾಳಿಬೀಡು, ಮಕ್ಕಂದೂರು, ಯವಕಪಾಡಿ, ಎಮ್ಮೆಮಾಡು, ಮೊಣ್ಣಂಗೇರಿ, ಕೂಡಿಗೆ, ಕುಮಾರಳ್ಳಿ ಮತ್ತು ಪೊನ್ನಂಪೇಟೆ ಪ್ರದೇಶಗಳಿಂದ ನಿರಾಕ್ಷೇಪಣಾ ಅರ್ಜಿಗಳು ಸ್ವೀಕರಿಸಲಾಗಿದೆ. ಇತ್ತೀಚೆಗೆ ಆನ್‍ಲೈನ್ ಮೂಲಕವೂ ಮೂರು ಹೊಸ ಅರ್ಜಿಗಳು ಬಂದಿವೆ ಎಂದು ತಿಳಿಸಿದರು.
ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸದೇ ಜಿಲ್ಲೆಯಲ್ಲಿ ಕೊಳವೆಬಾವಿ ತೋಡುವ ರಿಗ್ ಯಂತ್ರಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಅವರು, 2025-26ನೇ ಸಾಲಿನಲ್ಲಿ ಹೊಸದಾಗಿ ಕೊರೆದ ಕೊಳವೆಬಾವಿಗಳ ಯಶಸ್ಸು-ವಿಫಲತೆ ಹಾಗೂ ವಿಫಲ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 45 ನಿರೀಕ್ಷಣಾ ಬಾವಿಗಳಿಂದ ಪ್ರತಿ ತಿಂಗಳು ಜಲಮಟ್ಟದ ದಾಖಲೆ ಸಂಗ್ರಹಿಸಲಾಗುತ್ತಿದ್ದು, ಕುಶಾಲನಗರ ಹಾಗೂ ವಿರಾಜಪೇಟೆ ಪ್ರದೇಶಗಳಲ್ಲಿ ನಿರ್ಮಾಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಎರಡು ಕೊಳವೆಬಾವಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದರು.
ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್ ಕುಮಾರಸ್ವಾಮಿ ಮಾತನಾಡಿ, 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಉಪಯೋಜನೆಯಡಿ 98 ಕೊಳವೆಬಾವಿಗಳನ್ನು ತೋಡಲಾಗಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?ಕೊಡಗು | ಹಸ್ತಪ್ರತಿ ಸಂರಕ್ಷಣೆ–ಡಿಜಿಟಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭೂ ವಿಜ್ಞಾನಿ ದೀಕ್ಷಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.




