ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಕೂಡ ವರ್ಗಾವಣೆ ಮಾಡಲಾಗಿದೆ. ಯತೀಶ್ ಅವರ ಸ್ಥಾನಕ್ಕೆ ಅರುಣ್ ಕೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಅನುಪಮ್ ಅಗರ್ವಾಲ್ ಅವರನ್ನು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದರೂ, ಸ್ಥಾನ ನಿಗದಿಪಡಿಸಿಲ್ಲ.
ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗಿರುವ ಡಾ. ಅರುಣ್ ಕೆ ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆಯಲ್ಲಿದ್ದರು. ಅವರ ಸ್ಥಾನಕ್ಕೆ 2017ರ ಬ್ಯಾಚಿನ ಐಪಿಎಸ್ ಅಧಿಕಾರಿ ಹರಿರಾಮ್ ಶಂಕರ್ ಅವರನ್ನು ನಿಯೋಜಿಸಲಾಗಿದೆ.

