ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಸೋಮವಾರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಸಾಲಬಾಧೆ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಮೃತದೇಹಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ” ಎಂದರು.
“ನಗರ ಮತ್ತು ಜಿಲ್ಲೆಯಲ್ಲಿ ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ.
ಮೀಟರ್ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತಿಳಿಯಲಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಮಹಾಧರಣಿ | ದುಡಿವ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಎಂ ಸಭೆ: ಸಚಿವ ಕೃಷ್ಣ ಬೈರೇಗೌಡ
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಸೇರಿದಂತೆ ಇತರರಿದ್ದರು.